ಬಾಬಾನಗರದ ಬಳಿ ಹೊಸ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಲು ಡಿಸಿಎಂ ಗೆ ಮನವಿ ಸಲ್ಲಿಸಿದ ಸಚಿವ ಎಂ.ಬಿ.ಪಾಟೀಲ ಸ್ಪಷ್ಟನೆ
ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಭಾರಿ ಕೈಗಾರಿಕೆ ಸಚಿವ ಎಂಬಿ ಪಾಟೀಲ ಸ್ಪಷ್ಟಪಡಿಸಿದರು.
ಗುರುವಾರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನ, ಭಿನ್ನಮತ ಇಲ್ಲ ಎಂದು ಸ್ಪಷ್ಪಪಡಿಸಿದರು.
ರಣದೀಪ್ ಸುರ್ಜೇವಾಲ ಅವರು ಪಕ್ಷದ ಶಾಸಕರೊಂದಿಗೆ ಚರ್ಚಿಸಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ವಿಜಯಪುರದಲ್ಲಿ ನಿಗದಿಪಡಿಸಿರುವ ಮುಂದಿನ ಸಚಿವ ಸಂಪುಟ ಸಭೆ ಸಿದ್ಧತೆ ಕುರಿತು ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ತುಬುಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿಯಲ್ಲಿ ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.

ರೈತರಿಗೆ ಸೂಕ್ತ ಪರಿಹಾರ ಸಿಗಬೇಕು
ದೇವನಹಳ್ಳಿ ಬಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ 10 ಗ್ರಾಮಗಳ ವ್ಯಾಪ್ತಿಗೆ ಸೇರಿರುವ 1,282 ಎಕರೆ ಭೂಮಿ ಅಗತ್ಯವಿದೆ. ಆದರೆ, ರೈತರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಡುತ್ತಿದ್ದಾರೆ. ಈ ಸಂಬಂಧ ಜುಲೈ 4ರ ಶುಕ್ರವಾರ ಸಿಎಂ ಜೊತೆ ಸಭೆ ಏರ್ಪಡಿಸಲಾಗಿದೆ. ಕೈಗಾರಿಕೆಗಳಿಗೆ ಜಮೀನು ಬೇಕಾಗುತ್ತದೆ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ ಕೊಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ ಇದೇ ಸಂದರ್ಭದಲ್ಲಿ ಹೇಳಿದರು.

