ಕೇಂದ್ರ-ರಾಜ್ಯ ಸರಕಾರ ವಿರುದ್ಧ ವ್ಯಾಪಕ ಆಕ್ರೋಶ | ಕೆಲವೆಡೆ ತಟ್ಟದ ಬಂದ್ ಬಿಸಿ | ಪ್ರಯಾಣಿಕರ ಪರದಾಟ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕನ್ನಡ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಹೋರಾಟವು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಯಶಸ್ವಿಯಾಗಿದೆ.
ಮಂಗಳವಾರವಷ್ಟೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ಕೊಟ್ಟಾಗ ವಿವಿಧ ಸಂಘಟನೆಗಳ ಮುಖಂಡರಿಗೆ, ರಾಜಕೀಯ ಪಕ್ಷಗಳ ಮುಖಂಡರಿಗೆ, ಸಾರ್ವಜನಿಕರಿಗೆ ಅಖಂಡ ಕರ್ನಾಟಕ ಬಂದ್ ಯಶಸ್ವಿಯಾಗುವ ವಿಶ್ವಾಸ ಇರಲಿಲ್ಲ. ಆದರೆ, ಕಡಿಮೆ ಅವಧಿಯಲ್ಲಿ ಆಯೋಜನೆಗೊಂಡ ಶುಕ್ರವಾರ ಬಂದ್‌ಗೆ ರಾಜಧಾನಿ ಬೆಂಗಳೂರು ಒಳಗೊಂಡಂತೆ ಬಹುತೇಕ ಜಿಲ್ಲೆಗಳಲ್ಲೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು.
ವರ್ತಕರು, ಸಂಘಟನೆಗಳು, ಆಟೊ, ಖಾಸಗಿ ಬಸ್ ಚಾಲಕರು, ವಕೀಲರು, ವಿದ್ಯಾರ್ಥಿಗಳು ತೋರಿದ ಪ್ರತಿಕ್ರಿಯೆ ನಿರೀಕ್ಷೆಯನ್ನೂ ಮೀರಿಸಿತು. ಇಡೀ ಬಂದ್‌ನಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.
ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಕೆಲ ಭಾಗ, ಅಂತರರಾಜ್ಯ ಮಾರ್ಗದ ಸರಕಾರಿ ಬಸ್ ಸಂಚಾರ ಇಲ್ಲದೆ ಪ್ರಯಾಣಿಕರು ಪರದಾಡಿದರು. ನಗರದ ಬಸ್ ನಿಲ್ದಾಣದಿಂದ ಬೆಳಿಗ್ಗೆ ಸಂಚಾರ ಆರಂಭಿಸಿದ್ದವು. ಆದರೆ ಹೋರಾಟದ ತೀವ್ರತೆ ಹೆಚ್ಚಾದಾಗ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದವು. ಸಾರಿಗೆ ಬಸ್ ನಿಲ್ದಾಣಕ್ಕೆ ಬಸ್‌ಗಳು ಬಾರದ ಹಿನ್ನೆಲೆಯಲ್ಲಿ ನಿಲ್ದಾಣ ಬಿಕೋ ಎನ್ನುತ್ತಿತ್ತು. ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರದಿಂದ ಇತರೆ ಪಟ್ಟಣ, ಗ್ರಾಮೀಣ ಪ್ರದೇಶಕ್ಕೆ ತೆರಳಬೇಕಾದ ಪ್ರಯಾಣಿಕರು ಬಸ್‌ಗಾಗಿ
ಕಾದು ಪರದಾಡಿದರು.
ಅದರಲ್ಲೂ ಮಂಡ್ಯ ಮೈಸೂರು, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ತುಮಕೂರು, ಹಾಸನ, ಚಿತ್ರದುರ್ಗ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿಯೂ ಬಂದ್ ಬಿಸಿ ಜನರಿಗೆ ತಟ್ಟಿದ್ದು, ಯಾದಗಿರಿ ಜಿಲ್ಲೆಯ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ಕನ್ನಡ ಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರದಲ್ಲಿ ಎಮ್ಮೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರ ಅಂಟಿಸಿ ಮೆರವಣಿಗೆ ನಡೆಸಲಾಯಿತು.
ಚಾಮರಾಜನಗರದ ಸಿದ್ಧಾರ್ಥ ಚಿತ್ರಮಂದಿರದಲ್ಲಿ ತಮಿಳು ಚಿತ್ರ ಚಂದ್ರಮುಖಿ-2 ಚಿತ್ರದ ಪೋಸ್ಟರ್ ಹರಿದು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲೂ ಬಂದ್‌ಗೆ ನೀರಸ ಪ್ರತಿಕ್ರಿಯೆಯಿತ್ತು.
ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹಾಗೂ ಚಿಕ್ಕೋಡಿಯಲ್ಲಿ ಬಂದ್ ಕೇವಲ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆಗೆ ಸೀಮಿತವಾಗಿತ್ತು.
ಬಹುತೇಕ ಕಡೆಗಳಲ್ಲಿ ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆಯ ಕೇಂದ್ರ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಪೊಲೀಸರೇ ಬಂದ್ ಮಾಡಿದ್ದರು.ಆಯಾ ಜಿಲ್ಲಾ ಕೇಂದ್ರಗಳಲ್ಲಿನ ವೃತ್ತದ ಕಡೆಗೆ ನಾಲ್ಕು ದಿಕ್ಕಿನಲ್ಲೂ ಯಾವುದೇ ವಾಹನ ಸಂಚಾರ ಮಾಡದಂತೆ ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

