ವಿಜಯಪುರ: ವಿಜಯಪುರ ಐತಿಹಾಸಿಕ ನಗರವಾಗಿದ್ದು, ದೇಶ ವಿದೇಶದ ಪ್ರವಾಸಿಗರು ಭೇಟಿ ನೀಡುವ ಪ್ರವಾಸಿ ತಾಣವೂ ಆಗಿರುವುದರಿಂದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು. ಅವರು ವಿಜಯಪುರ ನಗರದ ಸ್ವಚ್ಛತೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದು, ಕೂಡಲೇ ತಡೆಗಟ್ಟುವ ನಿಟ್ಟಿನಲ್ಲಿ ಮನೆ-ಮನೆಗೆ ತೆರಳಿ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನಕ್ಕೆ ಕಸ ಹಾಕಬೇಕು. ನಗರದ ಪ್ರತಿ ವಾರ್ಡಗಳಲ್ಲಿರುವ ವಾಣಿಜ್ಯ ಹಾಗೂ ವಸತಿ ಸಮುಚ್ಛಯಗಳ ಕಟ್ಟಡಗಳ ಪ್ರತಿ ಮನೆಗೆ ತೆರಳಿ ಹಸಿ ಮತ್ತು ಒಣ ಕಸ ಪ್ರತ್ಯೇಕಿಸಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಹಾಗೂ ಪ್ರತಿ ವಾರ್ಡಗಳಲ್ಲಿಯೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡುಸಬೇಕು.
ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಅಂಗಡಿ ಹಾಗೂ ಸಂಗ್ರಹಿಸಿಟ್ಟಿರುವ ಗೋದಾಮುಗಳ ಮೇಲೆ ದಾಳಿ ಮಾಡಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದು ನಾಶಗೊಳಿಸಿ,ಸಂಬಂಧಿಸಿದ ಮಾಲೀಕರಿಗೆ ದಂಡ ವಿಧಿಸಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿನ ಬಿಡಾಡಿ ದನಗಳಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು. ಕೂಡಲೇ ತಂಡ ರಚಿಸಿಕೊಂಡು ರಸ್ತೆಯ ಮೇಲಿನ ಬಿಡಾಡಿ ದನಗಳನ್ನು ಗೋಶಾಲೆಗೆ ಸ್ಥಳಾಂತರಿಸುವುದು ಹಾಗೂ ಸಂಬಂಧಪಟ್ಟ ದನಗಳ ಮಾಲೀಕರ ವಿರುದ್ಧ ದೂರು ದಾಖಲಿಸುವುದು. ನಗರದಲ್ಲಿನ ಎಲ್ಲ ವಾಣಿಜ್ಯ ಮಳಿಗೆಗಳ ವ್ಯಾಪಾರ ಪರವಾನಿಗೆ ಪಡೆದುಕೊಳ್ಳಲು ನೋಟೀಸ್ ನೀಡಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಹಾಗೂ ವ್ಯಾಪಾರ ಪರವಾನಿಗೆ ಶುಲ್ಕ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಸಭೆಯಲ್ಲಿ ಮಹನಗರ ಪಾಲಿಕೆ ಆಯುಕ್ತರಾದ ಬದ್ರುದ್ದಿನ ಸೌದಾಗರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಿಕಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

