ವಿಜಯಪುರ ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದಾದ್ಯಂತ ಎರಡು ತಿಂಗಳ ಕಾಲ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು, ಅಭಿಯಾನದ ಭಾಗವಾಗಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಲು ಮತ್ತು ಅವುಗಳ ಪರಿಣಾಮಗಳ ಬಗ್ಗೆ ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲತೆಯಿಂದ ಅಭಿಯಾನದಲ್ಲಿ ಭಾಗವಹಿಸಬೇಕು ಎಂದರು.
ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣಕ್ಕಾಗಿ ನಿರಂತರ ಜಾಗೃತಿ, ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಸೆಪ್ಟೆಂಬರ್ ೩೦ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ರಾಜ್ಯದಾದ್ಯಂತ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರ ಸಮುದಾಯದೊಂದಿಗೆ ನಡೆಸಲಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ. ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದವರು ಹೇಳಿದರು.
ಈ ಅಭಿಯಾನವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಾರ್ವಜನಿಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಕ್ರೀಯರಾಗಿ ಭಾಗವಹಿಸಬೇಕು ಎಂದರು.
ಕಾರ್ಯಕ್ರಮವನ್ನು ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ವಿಶ್ವನಾಥ ಶಹಾಪುರ ಪ್ರತಿಜ್ಞಾ ವಿಧಿ ಭೋಧಿಸಿದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಪಿಯು ಉಪನಿರ್ದೇಶಕರಾದ ಸಿ.ಕೆ.ಹೊಸಮನಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮಹೇಶ ಮಾಳವಾಡಕರ, ಆರೋಗ್ಯ ಇಲಾಖೆಯ ಪಿ.ಎ.ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಾವಿತ್ರಿ ಗುಗ್ಗರಿ, ಆಹಾರ ಇಲಾಖೆಯ ಎಮ್,ಎಸ್,ಅರಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.