ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಅಧ್ಯಯನ ವಿಭಾಗ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗ ಇವರ ಸಹಯೋಗದಲ್ಲಿ ‘ಕನ್ನಡ ಸಾಹಿತ್ಯ ಪರಂಪರೆ- ಅವಲೋಕನ’ ಕಾರ್ಯಕ್ರಮವನ್ನು ಇದೇ ದಿ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ಕನ್ನಡ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್.ಮುಕುಂದರಾಜ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿವಿಯ ಕುಲಸಚಿವ ಶಂಕರಗೌಡ ಎಸ್ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಹಾಗೂ ಮೈಸೂರಿನ ಹಿರಿಯ ಪತ್ರಕರ್ತ ಡಾ.ಗಣೇಶ ಅಮೀನಗಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತಿತರಿರಲಿದ್ದಾರೆ. ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕರಾದ ಕನ್ನಡ ವಿಭಾಗದ ಮುಖ್ಯಸ್ಥ, ಪ್ರೊ.ಎಂ.ನಾಗರಾಜ ಮತ್ತು ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.