ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಇವರ ಸಹಯೋಗದಲ್ಲಿ ಸೆಪ್ಟೆಂಬರ್ ೬ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕನ್ನಡ ನಾಡಿನ ಪ್ರತಿಷ್ಠಿತ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಅಂದು ಬೆಳಿಗ್ಗೆ ೧೧ ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ ಘನ ಉಪಸ್ಥಿತಿ ವಹಿಸಲಿದ್ದಾರೆ. ಜವಳಿ,ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಘನ ಅಧ್ಯಕ್ಷತೆ ವಹಿಸಲಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಅಬಕಾರಿ ಖಾತೆ ಸಚಿವರಾದ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪೂರ ಅವರು ಗೌರವ ಉಪಸ್ಥಿತರಿರಲಿದ್ದಾರೆ. ಸಮಾರಂಭದಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.