ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಾ. ಸರ್ವಪಳ್ಳಿ ರಾಧಾಕೃಷ್ಣನ್ ರವರು ಒಬ್ಬ ಮಹಾ ಮೇಧಾವಿ, ತತ್ವಜ್ಞಾನಿ ಮತ್ತು ದಾರ್ಶನಿಕರಾಗಿ ಇಡೀ ಜಗತ್ತಿಗೆ ಆದರ್ಶ ಶಿಕ್ಷಕರಾಗಿದ್ದರು. ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿ ಜನಮೆಚ್ಚಿಗೆ ಪಡೆದ ಒಬ್ಬ ಶ್ರೇಷ್ಠ ಶಿಕ್ಷಕರಾಗಿದ್ದಾರೆ. ಜಗತ್ತಿನಲ್ಲಿ ಎಲ್ಲ ವೃತ್ತಿಗಳಲ್ಲಿ ಶಿಕ್ಷಕ ವೃತ್ತಿಯು ಅತಿ ಪವಿತ್ರವಾದುದು. ಶಿಕ್ಷಕ ವಿದ್ಯಾರ್ಥಿಗಳಲ್ಲಿರುವ ಅಂಧಕಾರವೆಂಬ ಅಜ್ಞಾನವನ್ನು ಜ್ಞಾನದ ಜ್ಯೋತಿಯನ್ನು ಬೆಳಗಿಸುವವನು ಎಂದು ವಿಜಯಪುರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ ಬಿರಾದಾರ ಅಭಿಪ್ರಾಯಪಟ್ಟರು.
ಅವರು ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮನಃಶಾಸ್ತç ವಿಭಾಗದ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎ.ಐ.ಹಂಜಗಿ ಮಾತನಾಡಿ, ವಿದ್ಯಾರ್ಥಿಗಳ ಭಾವೀ ಭವಿಷ್ಯವನ್ನು ರೂಪಿಸಲು ಶಿಕ್ಷಕನಾದವನು ಸದಾ ಚಿಂತಿಸುತ್ತಾ, ವಿದ್ಯಾರ್ಥಿಗಳನ್ನು ನಾಳಿನ ಉತ್ತಮ ಸತ್ಪ್ರಜೆಗಳನ್ನಾಗಿ ನಿರ್ಮಿಸಿ ನವ ಭಾರತ ನಿರ್ಮಾಣಕ್ಕಾಗಿ ಶ್ರಮಿಸಬೇಕಾಗಿರುವದು ಅವಶ್ಯಕ. ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆದು ಜೀವನದಲ್ಲಿ ಏನ್ನನ್ನಾದರೂ ಸಾಧಿಸುವ ಛಲವನ್ನು ಹೊಂದಿರಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ಸಂಘದ ಸಹ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾದ ಸರ್ವಶ್ರೀ ಚಟ್ಟೇರ ಇವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಶಿಕ್ಷಕರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ. ಚಂದ್ರಕಾಂತ.ಬಿ, ಐ.ಕ್ಯೂ.ಎ.ಸಿ. ಸಂಚಾಲಕ ಪ್ರೊ. ಆರ್,ಎಸ್,ಕುರಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ, ಸಂಗಮೇಶ ಗುರವ ವೇದಿಕೆಯ ಮೇಲಿದ್ದರು.
ಸಮಾರಂಭದಲ್ಲಿ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಂಗೂಬಾಯಿ ಬಿರಾದಾರ ಪ್ರಾರ್ಥಿಸಿದರು. ಡಾ. ಚಂದ್ರಕಾಂತ. ಬಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರುಕ್ಮೀಣಿ ಬಬಲಾದಕರ ಕಾರ್ಯಕ್ರಮ ನಿರೂಪಿಸಿದರು.