ಬೆಂಗಳೂರಿಗೆ ಯೆಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಇನ್ನೊಂದಿಷ್ಟು ದಿನ ಮುಂದುವರೆಯಲಿದ್ದು ಮುಂದಿನ ನಾಲ್ಕು ದಿನ ಅಂದರೆ ಸೆಪ್ಟೆಂಬರ್ 16ರವರೆಗೂ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸೆಪ್ಟೆಂಬರ್ 16ವರೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂತೆಯೇ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದೆ. ವಿಜಯಪುರ, ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಜಾರಿ!
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರ ಮತ್ತೊಂದಿಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.