ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಪ್ಪಿಸಲು ಪರಿಣಾಮಕಾರಿಯಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಾಗುವಂತೆ ಹಾಗೂ ಅಪಘಾತ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮನಗೂಳಿ ಮತ್ತು ಉತ್ನಾಳ ಕ್ರಾಸ್‌ನಲ್ಲಿ ಅಪಘಾತಗಳು ಸಂಭವಿಸುವ ಹಿನ್ಜನಲೆಯಲ್ಲಿ ರಸ್ತೆ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಮನಗೂಳಿ ಅಂಡರ್‌ಪಾಸ್ ಕಾಮಗಾರಿ ಕೈಗೊಳ್ಳಲು ಕ್ರೀಯಾಯೋಜನೆ ಸಿದ್ಧಪಡಿಸಲಾಗುತ್ತಿದ್ದು, ಯೋಜನಾ ವಿವರಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು ಎಂದು ರಾಷ್ಟಿçÃಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಕೈಗೊಂಡ ಕ್ರಮಗಳ ಕುರಿತಾಗಿ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ, ಡಿವೈಎಸ್‌ಪಿ ಬಸವರಾಜ ಯಲಿಗಾರ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

