ವಿಜಯಪುರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಖಡಕ್ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.
ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ತೊಂದರೆಯಾಗುತ್ತಿದೆ. ಮಳೆ ನೀರು ಚರಂಡಿ ನಿರ್ಮಾಣ ಕಾರ್ಯ ಕೈಗೊಂಡು ಎಲ್ಲಿಯೂ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ಕಷ್ಟ-ಕಾರ್ಪಣ್ಯಗಳನ್ನು ಅರಿತುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಇಂತಹ ಪ್ರದೇಶದಲ್ಲಿ ಕಾಮಗಾರಿಗಳನ್ನು ಕೈಗೊಂಡು, ಸಮಸ್ಯೆ ಮರುಕಳಿಸದಂತೆ ಶಾಶ್ವತವಾಗಿ ಸಮಸ್ಯೆಗೆ ಪರಿಹಾರ ದೊರಕಿಸಲು ಸೂಕ್ತ ಕ್ರಿಯಾಯೋಜನೆಯನ್ನು ರೂಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ನಾಗರಿಕ ಸೌಲಭ್ಯದ ನಿವೇಶಗಳನ್ನು ನೀಡುವಾಗ ಸರ್ಕಾರಿ ಶಾಲೆಗಳಿಗೆ ಮೊದಲಾದ್ಯತೆ ನೀಡಬೇಕು.
ಹಂಚಿನಾಳ ಕೆರೆ ೯.೫೦ ಕೋಟಿ ರೂ. ಅನುದಾನದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಕೆರೆಯ ಹೂಳು ತೆಗೆಯುವುದು ಸೇರಿದಂತೆ ಒಟ್ಟಾರೆ ಗುಣಮಟ್ಟದಿಂದ ಕೂಡಿದ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.
ನಗರದಲ್ಲಿರುವ ಐತಿಹಾಸಿಕ ಬಾವಡಿಗಳನ್ನು ಸ್ವಚ್ಛಗೊಳಿಸಿ ಅಲ್ಲಿಯ ನೀರನ್ನು ಸಾರ್ವಜನಿಕರ ಗೃಹ ಬಳಕೆಗೆ ಪೂರೈಕೆ ಮಾಡಿದ್ದಲ್ಲಿ, ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದರು.
ಸಭೆಯಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಡಾ.ಆನಂದ ಕೆ., ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪ್ರಾಧಿಕಾರದ ಸದಸ್ಯರಾದ ಮಹಾದೇವ ರಾಠೋಡ, ಸಂತೋಷ ಪವಾರ, ಸಲೀಮ ಪೀರಜಾದೆ, ಶ್ರೀಮತಿ ಕಾಶಿಬಾಯಿ ಹಡಪದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ವಿಜಯಪುರ ನಗರದಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೋ, ಅಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ನಗರದಲ್ಲಿ ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು.”
– ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ ನಗರ ಶಾಸಕರು

“ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅತಿಕ್ರಮಣಗೊಂಡ ಉದ್ಯಾನವನಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ನಗರದಲ್ಲಿ ಒತ್ತುವರಿ ತೆರವುಗೊಳಿಸುವ ಮುನ್ನ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕ್ರಮ ವಹಿಸಬೇಕು.”
– ಎಂ.ಬಿ.ಪಾಟೀಲ
ಜಿಲ್ಲಾ ಉಸ್ತುವಾರಿ ಸಚಿವರು