ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಸೆ.೨೬ ರಿಂದ ೨೮ರವರೆಗೆ ಬಿರುಗಾಳಿಯೊಂದಿಗೆ ಭಾರಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಾಗೂ ಸೆ.೨೯ ರಿಂದ ಅ.೦೩ರವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಹಾಗೂ ಕೆಎಸ್‌ಎನ್‌ಡಿಎಂಸಿ ಮುನ್ಸೂಚನೆಗಳನ್ನು ನೀಡಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಕ್ಷಣೆ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧರಾಗಿರಲು ಮತ್ತು ರಜೆ ಮೇಲೆ ತೆರಳಲು-ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರಿಯವರ ಪೂರ್ವಾನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯ ಮಳೆ-ಗಾಳಿಯಿಂದ ಜನ-ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆ ಹಾಗೂ ಅನಾನೂಕೂಲತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಉಪವಿಭಾಗ-ಜಿಲ್ಲಾ-ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ನೊಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು ದಿನದ ೨೪/೭ ಕಾರ್ಯನಿರ್ವಹಿಸಿ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

