ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಅನೈತಿಕ ದತ್ತು ಮಾರಾಟ, ಅನೈತಿಕ ಮಕ್ಕಳ ಮಾರಾಟ ಸೇರಿದಂತೆ ಇನ್ನಿತರ ಕೃತ್ಯಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿರುವ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿ ಎಲ್ಲ ಇಲಾಖೆಗಳ ಮೇಲಿದೆ. ಹಾಗಾಗಿ ಮಕ್ಕಳನ್ನು ರಕ್ಷಿಸುವತ್ತ ಗಮನಹರಿಸುವಂತೆ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ದೇಶದ ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ನಿರ್ಮಿಸುವುದಷ್ಟೇ ಅಲ್ಲದೇ ಅವರ ಪಾಲನೆ ಹಾಗೂ ರಕ್ಷಣೆ ಮಾಡುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಪೊಲೀಸ್ ಠಾಣೆಯಲ್ಲಿ ದಾಖಲಾದ ಪೊಕ್ಸೋ ಪ್ರಕರಣಗಳನ್ನು ತಕ್ಷಣವೇ ಇತ್ಯರ್ಥಗೊಳಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ನ್ಯಾಯಾಲಯದ ಮಾರ್ಗಸೂಚಿಯ ಆದೇಶದಂತೆ ಬಗೆಹರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಯೋಜನಾ ನಿರ್ದೇಶಕರಾದ ಸಿ. ಬಿ. ದೇವರಮನಿ, ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯ್ಯಾಧೀಶರು ಸಂತೋಷ ಕುಂದರ, ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ. ಕೆ. ಚವ್ಹಾಣ, ಸವಿತಾ ಗುಗ್ಗರಿ, ಜಿಲ್ಲಾ ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.