ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಅಕ್ಟೋಬರ್ 13 ಮತ್ತು 14 ರಂದು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ ಯಂತ್ರಗಳ ಉತ್ಪಾದಕ ಸಂಸ್ಥೆ ಡಿ. ಎನ್. ಸೊಲೂಶನ್ಸ್ ಆಯೋಜಿಸಿದ್ದ ಎರಡು ದಿನಗಳ ಉದ್ಯೋಗ ಮೇಳದಲ್ಲಿ 32 ಜನ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಡಿ. ಎನ್. ಸೊಲೂಶನ್ಸ್ ಸಂಸ್ಥೆಯ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಸ್ಮೀತಾ ಆರ್. ಅವರು ಈ ಉದ್ಯೋಗ ಮೇಳದಲ್ಲಿ ನಡೆಸಿದ ಸಂದರ್ಶನದಲ್ಲಿ ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಡಿಪ್ಲೋಮಾ ಮೆಕ್ಯಾನಿಕಲ್ ಎಂಜಿಜಿನೀಯರಿಂಗ್, ಎಲೆಕ್ಟ್ರಿಕಲ್ ಎಂಜಿನೀಯರಿಂಗ್ ವಿಭಾಗದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಎಂ. ಸಿ. ಬಿರಾದಾರ, ಪ್ಲೇಸಮೆಂಟ್ ಅಧಿಕಾರಿ ಸುಧನ್ವ ವಿ. ಕುಲಕರ್ಣಿ, ಸಂತೋಷ ಹಿರೇಮಠ, ಪಾಂಡುರಂಗ ಅಸ್ಲಂಕರ, ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.
ಈ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲರು ಮತ್ತು ಬಿಎಲ್‌ಡಿಇ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ವಿದ್ಯಾಲಯದ ಎಲ್ಲಾ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.