ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಮಾಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ಅಧ್ಯಯನ ವಿಭಾಗ ಪ್ರಧಾನ ಮಂತ್ರಿ ಉಚ್ಚತಾರ ಶಿಕ್ಷಾ ಅಭಿಯಾನ (Pಒ-UShಚಿ) ಉನ್ನತ ಶಿಕ್ಷಣ ಸಚಿವಾಲಯ ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಅವರ ಅನುದಾನ ಅಡಿಯಲ್ಲಿ ಬುಧವಾರ ಆಯೋಜಿಸಿದ್ದ ‘ಜೀವ ವಿಜ್ಞಾನ ಹಾಗೂ ವೈದ್ಯಕೀಯ ವಿಜ್ಞಾನದಲ್ಲಿ ಜೈವಿಕ ಮಾಹಿತಿ ವಿಜ್ಞಾನ ಉಪಯೋಗತೆ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೌಶಲ್ಯಾಭಿವೃದ್ಧಿಯು ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಲು ಈ ಕೌಶಲ್ಯಗಳು ನೆರವಾಗುತ್ತವೆ. ಇದರಿಂದ ದೇಶದ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಜೊತೆಗೆ ನಿರುದ್ಯೋಗ ಸಮಸ್ಯೆಯು ಕೂಡ ಕಡಿಮೆಯಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಡಾ. ಮಹಾಂತೇಶ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳಿಗೆ ಜೈವಿಕ ಮಾಹಿತಿ ವಿಜ್ಞಾನದಲ್ಲಿ ಅಗತ್ಯವಿರುವ ಕೌಶಲ್ಯಗಳನ್ನು ವಿಸ್ತಾರವಾಗಿ ವಿವರಿಸಿ, ವಿದ್ಯಾರ್ಥಿಗಳಿಗೆ ಈ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಉದ್ಯಮಶೀಲತೆಯ ಮಹತ್ವ ಮತ್ತು ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಾಗಾರದಲ್ಲಿ ಬಿ.ಎಸ್. ಎಮ್‌ಐಟಿ ಮಣಿಪಾಲ್‌ನ ಡಾ. ರವೀಂದ್ರನಾಥ ಮಾತನಾಡಿ, ವಿದ್ಯಾರ್ಥಿಗಳಿಗೆ ಜೈವಿಕ ಮಾಹಿತಿ ವಿಜ್ಞಾನದ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎಂಬುದರಲ್ಲಿ ಸಹಕಾರ ನೀಡುವ ರೀತಿಯನ್ನು ವಿವರಿಸಿದರು.
ಈ ಕ್ಷೇತ್ರದಲ್ಲಿ ಅಗತ್ಯವಿರುವ ಹಲವು ಕೌಶಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜೊತೆಗೆ ಇತ್ತೀಚಿನ ಹೊಸ ಹೊಸ ಆವಿಷ್ಕಾರಗಳ ಕುರಿತು ಬೆಳಕು ಚೆಲ್ಲಿದರು.
ಇದೇ ಸಂದರ್ಭದಲ್ಲಿ ಜೈವಿಕ ಮಾಹಿತಿ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಸ್.ಬಿ.ಮಾಡಗಿ ವಿದ್ಯಾರ್ಥಿಗಳಿಗೆ ಈ ಕಾರ್ಯಾಗಾರದ ಮಹತ್ವ ಮತ್ತು ಅವಶ್ಯಕತೆಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಜೈವಿಕ ಮಾಹಿತಿ ವಿಜ್ಞಾನ ಕ್ಷೇತ್ರದಲ್ಲಿ ಹೊಸ ಕೌಶಲ್ಯಗಳನ್ನು ಕಲಿಯುವುದರಿಂದ ಅವರ ವೃತ್ತಿಜೀವನಕ್ಕೆ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಹೇಗೆ ಸಹಾಯವಾಗುತ್ತದೆ ಎಂದು ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಳ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದರು. ಕಾರ್ಯಕ್ರಮದ ಸಂಯೋಜಕ ಡಾ.ಬಾಬು ಆರ್.ಎಲ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೈವಿಕ ಮಾಹಿತಿ ಅಧ್ಯಯನ ವಿಭಾಗದ ವಿದ್ಯಾರ್ಥಿ ಪ್ರಿಯಂಕಾ ನಾಯ್ಕ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಜಾಯ್. ಹೊಸಕೇರಿ ವಂದಿಸಿದರು.