ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಇವರ ಸಹಯೋಗದೊಂದಿಗೆ ಅಕ್ಟೋಬರ್ ೨೭ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆಯನ್ನು ನಗರದ ಗಗನ ಮಹಲ್ ಆವರಣದಲ್ಲಿ ಆಯೋಜಿಸಲಾಗಿದೆ.
ಈ ಚಿತ್ರಕಲಾ ಸ್ಪರ್ಧೆಯು ಅಕ್ಟೋಬರ್ ೨೭ರ ಬೆಳಿಗ್ಗೆ ೯.೩೦ ರಿಂದ ೧೧ರವರೆಗೆ ನಡೆಯಲಿದ್ದು, ೬ ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮಾಲಿನ್ಯ ನಿಲ್ಲಿಸಿ ವಿಷಯ ಕುರಿತು ಹಾಗೂ ೯ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಚ್ಛ ಸುಂದರ ನನ್ನ ಕನಸಿನ ಪರಿಸರದ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.
ಪೋಸ್ಟರ್ ಬಿಡುಗಡೆ : ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಚಿತ್ರಕಲಾ ಸ್ಫರ್ಧೆಯ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬಿಡುಗಡೆಗೊಳಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಕ್ಟೋಬರ್ ೩೦ರಂದು ಬಾಗಲಕೋಟೆಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೮೯೫೧೩೯೩೩೦೬ ಸಂಪರ್ಕಿಸಬಹುದಾಗಿದೆ ಎಂದು ಪರಿಸರ ಅಧಿಕಾರಿ ವಿವೇಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

