ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ | ಜಿಲ್ಲಾ ನ್ಯಾಯಾಧೀಶ ಹರೀಶ್ ಎ. ಸುದ್ದಿಗೋಷ್ಠಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿಸೆಂಬರ್ ೧೩ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ.ಎ ಅವರು ತಿಳಿಸಿದರು.
ಶನಿವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಡಿಸೆಂಬರ್ ೧೩ ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್‌ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಿನಾಂಕ: ೦೧-೧೧-೨೦೨೫ಕ್ಕೆ ೪೫,೯೦೨ ಸಿವಿಲ್ ಪ್ರಕರಣಗಳು ಹಾಗೂ ೨೭,೧೪೫ ಕ್ರಿಮಿನಲ್ ಪ್ರಕರಣಗಳು ಒಳಗೊಂಡಂತೆ ಒಟ್ಟು ೭೩,೦೪೭ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ ೫,೪೯೨ ಸಿವಿಲ್ ಪ್ರಕರಣಗಳು ಹಾಗೂ ೬,೮೩೦ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು ೧೨,೩೨೨ ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬಂಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಸೆಪ್ಟೆಂಬರ್ ೧೩ ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ ೦೧ಕ್ಕೆ ಬಾಕಿ ಇದ್ದ ೭೫,೧೧೭ ಪ್ರಕರಣಗಳಲ್ಲಿ ೧೮,೫೫೮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿ, ರೂ.೨೭,೧೪,೭೩,೬೦೭ ಗಳ ಪರಿಹಾರ ಕೊಡಿಸಲಾಗಿದೆ. ಸುಮಾರು ೧,೮೮,೦೬೦ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೂ.೪೫,೩೦,೯೭,೦೪೮ ಪರಿಹಾರ ಕೊಡಿಸಲಾಗಿದೆ. ಜುಲೈ ೧೨ ರಂದು ಹಾಗೂ ಸೆಪ್ಟೆಂಬರ್ ೧೩ರಂದು ನಡೆದ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡುವಲ್ಲಿ ಜಿಲ್ಲೆಯು ರಾಜ್ಯಕ್ಕೆ ಸತತವಾಗಿ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಅವರು ಹೇಳಿದರು.
ಆದ್ದರಿಂದ, ಡಿಸೆಂಬರ್ ೧೩ರಂದು ಜಿಲ್ಲೆಯಲ್ಲಿ ಜರುಗುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ, ಇದೇ ನವೆಂಬರ್ ೨೯ರಂದು ಜಿಲ್ಲೆಯಲ್ಲಿ ಖಾಯಂ ಜನತಾ ನ್ಯಾಯಾಲಯದ ಸಿಟ್ಟಿಂಗ್ ಆರಂಭವಾಗಲಿದೆ ಎಂದು ಹೇಳಿದರು.
ದಿ: ೨೦-೧೧-೨೦೨೫ರ ರಾಜ್ಯ ಸರ್ಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ ೧೯೯೧-೯೨ ರಿಂದ ೨೦೧೯-೨೦೨೦ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ ೫೦ ರಷ್ಟು ರಿಯಾಯಿತಿ ನೀಡಿ, ನ.೨೧ ರಿಂದ ಡಿ.೧೨ ರವರೆಗೆ ಕಾಲಾವಕಾಶ ನೀಡಿದ್ದು, ಎಲ್ಲಾ ಕಕ್ಷಿದಾರರು ಹಾಗೂ ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾದ ಸುನೀಲ ಬಿರಾದಾರ, ಖಜಾಂಚಿಗಳಾದ ಎಂ.ಎ.ಕಾಖಂಡಕಿ ಉಪಸ್ಥಿತರಿದ್ದರು.

