ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನವೆಂಬರ್ ೨೬ ರಂದು ಸಂವಿಧಾನ ದಿನವನ್ನು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿರುವ ಜಿಲ್ಲೆಯ ಎಲ್ಲಾ ಅಮೃತ ಸರೋವರ ದಡದ ಮೇಲೆ ಆಚರಿಸಲಾಗುವುದು ಎಂದು ಜಿಲ್ಲಾ ಪಂಚಾಯತಿ ಸಿಇಓ ರಿಷಿ ಆನಂದ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನವೆಂಬರ್ ೨೬ ರಂದು ಅಮೃತ ಸರೋವರ ದಡದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ನರೇಗಾ ಕೂಲಿಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಒಳಗೊಂಡು “ಸಂವಿಧಾನ ದಿನ”ವನ್ನು ಅರ್ಥಪೂರ್ಣವಾಗಿ ಆಚರಿಸಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದುವುದು, ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ಕರ್ತವ್ಯಗಳು, ಹಕ್ಕುಗಳು ಮತ್ತು ಮೌಲ್ಯಗಳ ಕುರಿತು ಸಂಕ್ಷಿಪ್ತ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ನೀರಿನ ಸಂರಕ್ಷಣೆ, ಸ್ವಚ್ಛತೆ ಮತ್ತು ಅಮೃತ ಸರೋವರಗಳ ರಕ್ಷಣೆಯ ಪ್ರತಿಜ್ಞೆ ಸ್ವೀಕರಿಸುವುದು.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಯುವಕ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ, ನರೇಗಾ ಕೂಲಿಕಾರ್ಮಿಕರು ಮತ್ತು ಸ್ಥಳೀಯ ಜನರಿಂದ ಅಮೃತ ಸರೋವರ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಸಂವಿಧಾನ ಮತ್ತು ಮಿಷನ್ ಅಮೃತ ಸರೋವರ ಕುರಿತು ಮಾಹಿತಿ ಫಲಕಗಳನ್ನು ಪ್ರದರ್ಶಿಸುವುದು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜನೆ ಮಾಡಲು ಸೂಕ್ತ ನಿರ್ದೇಶನ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.

