ಉದಯರಶ್ಮಿ ದಿನಪತ್ರಿಕೆ
ಚಡಚಣ: ಶಾಲಾ ಎಸ್ ಡಿ ಎಂ ಸಿಯವರು ಹಾಗೂ ಶಾಲಾ ಶಿಕ್ಷಕರು ಪ್ರಾಮಾಣಿಕವಾಗಿ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿದಾಗ ಶಾಲಾ ಅಭಿವೃದ್ಧಿಯಾಗಲು ಸಾಧ್ಯ ಎಂದು ಗ್ರಾಮ ಸಂಪನ್ಮೂಲ ವ್ಯಕ್ತಿ ಅಶ್ವಿನಿ ಬಗಲಿ ಹೇಳಿದರು.
ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-2 ಮರಡಿ ಶಾಲೆಯಲ್ಲಿ 2023-24ನೇ ಸಾಲಿನ ಸಮಗ್ರ ಶಿಕ್ಷಣ ಅಭಿಯಾನದ ಯೋಜನೆಯ ಸಾಮಾಜಿಕ ಪರಿಶೋಧನಾ ವರದಿಯ ಶಾಲಾ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸರಕಾರದ ಯೋಜನೆಯ ಸದುಪಯೋಗ ಪಡೆದುಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಶ್ರಮಿಸಬೇಕೆಂದು ಹೇಳಿದರು.
ಶಿಕ್ಷಕ ಡಿ.ಎಸ್. ಬಗಲಿ ಮಾತನಾಡಿ, ಸರ್ಕಾರದಿಂದ ಬಂದ ಅನುದಾನವನ್ನು ಪ್ರಾಮಾಣಿಕವಾಗಿ ಬಳಕೆಮಾಡಿ ಶಾಲೆಯ ಭೌತಿಕ ಹಾಗೂ ಗುಣಮಟ್ಟದ ಶಿಕ್ಷಣ ಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದರು.ಇದಕ್ಕೆ ಪೋಷಕರ ಸಹಕಾರ ಅಗತ್ಯವಾಗಿ ಬೇಕು ಎಂದು ಹೇಳಿದರು.
ಶಿಕ್ಷಕ ಬಸವರಾಜ ಕರಜಗಿ ಮಾತನಾಡಿ, ಮಕ್ಕಳಿಗೆ ಒಳ್ಳೆಯ ಪರಿಸರ, ಉತ್ತಮ ಸಂಸ್ಕಾರ ನೀಡುವುದು ಅತೀ ಮುಖ್ಯವಾಗಿದೆ. ಉಚಿತ ಶಿಕ್ಷಣ, ಉಚಿತ ಪಠ್ಯಪುಸ್ತಕ, ಉಚಿತ ಸಮವಸ್ತ್ರ, ಬಿಸಿಯೂಟ, ಬಾಳೆಹಣ್ಣು, ಮೊಟ್ಟೆ ಹೀಗೆ ಹಲವಾರು ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ನಿಯಮಿತವಾಗಿ ಮಕ್ಕಳನ್ನು ಶಾಲೆಗೆ ಕಳಿಸಿ ಕೊಡಬೇಕೆಂದು ಪೋಷಕರಲ್ಲಿ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಲಕ ಪ್ರತಿನಿಧಿ ಕಲ್ಪನಾ ಝಂಡೆ ವಹಿಸಿದ್ದರು. ಮುಖ್ಯ ಶಿಕ್ಷಕ ಮಹಾಂತೇಶ ಉಮರಾಣಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಅಶ್ವಿನಿ ಬಗಲಿ ಹಾಗೂ ರೂಪಾ ಕಂಚನಾಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಪೋಷಕರು, ತಾಯಂದಿರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ, ಅಡುಗೆ ಸಹೋದರಿಯರು ಭಾಗವಹಿಸಿದ್ದರು.
ಶಿಕ್ಷಕ ಜಗದೀಶ ಚಲವಾದಿ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕ ಮಹಾದೇವ ಐಹೊಳ್ಳಿ ವಂದಿಸಿದರು.

