ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಸೋಮವಾರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಅವರು,ಹೊನವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳಾದ ತೆರಿಗೆ ವಸೂಲಾತಿ, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ವೈಯಕ್ತಿಕ ಶೌಚಾಲಯಗಳ ಪ್ರಗತಿ, ದ್ರವ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಪ್ರಗತಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಇ-ಕೆವೈಸಿ ಪ್ರಗತಿ ಸೇರಿದಂತೆ, ಹಲ ವಿಷಯಗಳ ಪರಿಶೀಲನೆ ನಡೆಸಿದರು.
ಗ್ರಾಮದಲ್ಲಿನ ಪುರಾತನ ಬಾವಿಯನ್ನು ವೀಕ್ಷಣೆ ಮಾಡಿ, ಬಾವಿ ಸಂಪೂರ್ಣವಾಗಿ ತ್ಯಾಜ್ಯದಿಂದ ಭರ್ತಿಯಾಗಿದ್ದು, ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ, ನಿಯಮಾನುಸಾರ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಸ್ಮಶಾನ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಅವರು, ಆಸ್ತಿ ಸಂರಕ್ಷಣೆ ಗ್ರಾಮಸ್ಥರಯ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶೋಭಾ ಶೀಳಿನ, ಅಧ್ಯಕ್ಷರಾದ ತುಕಾರಾಮ ದಡಕೆ, ಕಾರ್ಯದರ್ಶಿಗಳಾದ ಅಣ್ಣಪ್ಪ ಬಿದರಿ ಸೇರಿ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

