ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಒಟ್ಟು ೬೪ ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ ೭ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸೂಚನೆ ನೀಡಿದರು.
ಅವರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷೆ ಎರಡು ಅವಧಿಯಲ್ಲಿ ನಡೆಯಲಿದ್ದು, ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧೨ರವರೆಗೆ ನಡೆಯುವ ಪರೀಕ್ಷೆಗೆ ಒಟ್ಟು ೫೩೨೧ ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ೨ಗಂಟೆಯಿಂದ ಸಂಜೆ ೪.೩೦ರವರೆಗೆ ನಡೆಯುವ ಪರೀಕ್ಷೆಗೆ ೧೭೧೦೦ ಅಭ್ಯರ್ಥಿಗಳು ೬೪ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಯ ದಿನದಂದು ಪಾರದರ್ಶಕ ಹಾಗೂ ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು.ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸುವ ನಿಟ್ಟಿನಲ್ಲಿ ರೂಟ್ ಆಫೀಸರ್, ಓರ್ವ ಸಹಾಯಕ ಹಾಗೂ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಪರೀಕ್ಷೆ ನಿಯೋಜಿತ ಅಧಿಕಾರಿಗಳು ಪರೀಕ್ಷೆಗೂ ಮುನ್ನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು. ಪರೀಕ್ಷೆಯಲ್ಲಿ ಯಾವುದೇ ಗೊಂದಲಕ್ಕೆ ಅನುವು ಮಾಡಿಕೊಳ್ಳದೇ ಸುಸುತ್ರವಾಗಿ ನಡೆಯುವಂತೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್ ಕಾಸ್ಟಿಂಗ್ ಕಟ್ಟುನಿಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದಾಎ ಲೋಪವಾಗದಂತೆ, ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನಿಗಾ ವಹಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಡಿಸೆಂಬರ್ ೭ರಂದು ವೃಕ್ಷಥಾನ ಓಟವಿರುವುದರಿಂದ ಹಾಗೂ ಅದೇ ದಿನ ಟಿಇಟಿಯ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪೊಲೀಸ್ ಇಲಾಖೆಯಿಂದ ಸೂಕ್ತ ಸಹಕಾರ ಹಾಗೂ ನೆರವು ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ತೆರಳುವ ಪರೀಕ್ಷರ್ಥಿಗಳ ಅನುಕೂಲಕ್ಕಾಗಿ ಸೆಟ್ ಲೈಟ್ ಹಾಗೂ ಕೇಂದ್ರ ಬಸ್ ನಿಲ್ದಾಣದಿಂದ ಸಾರಿಗೆ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿ.ವಿ.ಸಾಲಿಮಠ, ಡಯಟ್‌ನ ಉಪ ನಿರ್ದೇಶಕರಾದ ಉಮಾದೇವಿ ಸೊನ್ನದ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

