ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಶಿವಶಂಕರಪ್ಪನವರು ೧೯೩೧ರ ಜೂ.೧೬ರಂದು ದಾವಣಗೆರೆಯಲ್ಲಿ ಜನಿಸಿದ್ದರು. ಮೂಲತಃ ಉದ್ಯಮಿಯಾಗಿದ್ದ ಅವರು, ೧೯೬೯ರಲ್ಲಿ ದಾವಣಗೆರೆ ನಗರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕಾಧ್ಯಕ್ಷ ಅಶೋಕ ವಾರದ ಹೇಳಿದರು.
ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ನಿಧನರಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಯುತರು ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಬಾಪೂಜಿ ವಿದ್ಯಾಸಂಸ್ಥೆಗಳು, ದಾವಣಗೆರೆ ಅಂಗವಿಕಲರ ಆಶಾಕಿರಣ ಟ್ರಸ್ಟ್, ಕ್ರಿಕೆಟ್ ಕ್ಲಬ್, ಸಂಘ ಸಂಸ್ಥೆ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಸಮಾಜದ ಎಲ್ಲಾ ರಂಗಗಳಲ್ಲೂ ತಮದೇ ಆದ ಛಾಪನ್ನು ಮೂಡಿಸಿದ್ದರು. ಅಪರಿಮಿತ ಜೀವನೋತ್ಸಾಹ, ಜನರ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿದ್ದರು ಎಂದರು. ಅವರ ಅಗಲಿಕೆ ನೋವುಂಟು ಮಾಡಿದೆ ಎಂದರು.
ಈ ವೇಳೆ ಸಾರಂಗಮಠದ ಪೀಠಾಧಿಪತಿ, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಯುವ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಎಸ್.ಎಸ್.ಮಲ್ಲೇದ, ಶ್ರೀಶೈಲ ನಂದಿಕೋಲ ಸೇರಿದಂತೆ ಇತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ
ಸಿಂದಗಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಿರಿಯ ಮುತ್ಸದ್ದಿ ರಾಜಕಾರಿಣಿ, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಸಾಯಬಣ್ಣ ಪುರದಾಳ, ಬಸವರಾಜ ಯರನಾಳ, ಶಾಂತೂ ರಾಣಾಗೋಳ, ಭೀಮನಗೌಡ, ಸುನಂದಾ ಯಂಪುರೆ, ಜಯಶ್ರೀ ಹದನೂರ, ವರ್ಷಾ ಪಾಟೀಲ, ಶರಣಮ್ಮ ನಾಯಕ, ಪ್ರತಿಭಾ ಚಳ್ಳಗಿ, ಶಾರದಾ ಬೇಟಗೇರಿ ಸೇರಿದಂತೆ ಆನೇಕರಿದ್ದರು.

