ಚಿರತೆಯನ್ನು ಕೂಡಲೇ ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯ
ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ತದ್ದೇವಾಡಿ ಹಾಗೂ ಮಣಕಂಲಗಿ ಪ್ರದೇಶದ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ದಾಳಿಗೆ ಸಾಕುಪ್ರಾಣಿಗಳು ಬಲಿಯಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಒಂದಾದ ಮೇಲೊಂದರಂತೆ ದನ, ಕರು, ಆಡು ಹಾಗೂ ಕುರಿಗಳನ್ನು ಚಿರತೆ ಕೊಂದು ಹಾಕುತ್ತಿರುವ ಘಟನೆಗಳು ವರದಿಯಾಗಿವೆ.
ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕೂದಲೆಳೆಯ ಅಂತರದಲ್ಲಿ ಚಿರತೆ ದಾಳಿಯಿಂದ ಪಾರಾಗಿದ್ದ ಘಟನೆ ಕೂಡ ನಡೆದಿದ್ದು, ಮುಂದಿನ ದಿನಗಳಲ್ಲಿ ಮಾನವ ಜೀವಕ್ಕೂ ಅಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಕರ್ನಾಟಕ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ನಾಗೇಂದ್ರ ಬಿರಾದಾರ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅರಣ್ಯಾಧಿಕಾರಿಗಳು ಚಿರತೆ ಹಿಡಿಯಲು ಬೋನುಗಳನ್ನು ಅಳವಡಿಸಿ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅವರು ತಿಳಿಸಿದ್ದಾರೆ.
ಚಿರತೆಯನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಮೂಲಕ ಈ ಭಾಗದ ಸಾಕುಪ್ರಾಣಿಗಳ ಜೀವಕ್ಕೆ ಉಂಟಾಗುತ್ತಿರುವ ಹಾನಿಯನ್ನು ತಡೆಯಬೇಕು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ರೈತ ಸಂಘದ ವತಿಯಿಂದ ಅರಣ್ಯ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

