ಬಾಲ ಮಂದಿರಕ್ಕೆ ದಿಢೀರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಕಿವಿಮಾತು
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಶುಕ್ರವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಲ ಮಂದಿರದ ಮೂಲಭೂತ ಸೌಕರ್ಯ ಪರಿಶೀಲಿಸಿದ ಅವರು, ಬಾಲ ಮಂದಿರದಲ್ಲಿರುವ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ,ಯಾವುದೇ ಕಾರಣಕ್ಕೂ ಮಕ್ಕಳಿಗೆ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಶೌಚಾಲಯಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರು, ಉತ್ತಮ ಆಹಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಮಕ್ಕಳಿಗೆ ಒದಗಿಸಬೇಕು. ಕೌಶಲ್ಯತೆಯನ್ನು ಹೆಚ್ಚಿಸಲು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಾಲಮಂದಿರದ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳ ಯೋಗಕ್ಷೇಮ ವಿಚಾರಿಸಿದರು.
ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು. ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಳ್ಳಬೇಕು. ಶ್ರಮವಹಿಸಿ ಓದಿ ಉನ್ನತ ಹುದ್ದೆ ಹೊಂದುವ ಗುರಿ ಹಾಕಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದ್ದು, ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳಬೇಕು ಎಂದು ಹೇಳಿದ ಅವರು, ಮಕ್ಕಳಿಗೆ ಕಂಪ್ಯೂಟರ್ ಬಗ್ಗೆ ಖುದ್ದಾಗಿ ತಿಳಿಸಿಕೊಟ್ಟರು.
ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು,ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕ್ರಮವಹಿಸಲು ಸೂಚಿಸಿದರು.
ಇದಕ್ಕೂ ಮೊದಲು, ನಗರದ ಕನಕದಾಸ ಬಡಾವಣೆಯಲ್ಲಿರುವ ಸ್ವಿಮ್ಮಿಂಗ ಫೂಲ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ದೀಪಾಕ್ಷಿ ಜಾನಕಿ ಸೇರಿದಂತೆ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

