ಗಾಯಾಳುಗಳಿಗೆ 50 ಸಾವಿರ ರೂ.ಪರಿಹಾರ | ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಮುಖ್ಯ ಕಾರಣ | ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟ್ರಾವೆಲ್ಸ್‌ನ ಸ್ಲೀಪರ್ ಬಸ್‌ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಈ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು
ಅಪಘಾತದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಂಪೂರ್ಣ ವರದಿ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು ನೀಡಲಾಗುವುದು. ಇದರ ಜೊತೆಗೆ, ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಹೀಗಾಗಿ ಮೃತರ ಕುಟುಂಬಗಳಿಗೆ ಒಟ್ಟು 7 ಲಕ್ಷ ರೂಪಾಯಿ ನೆರವು ದೊರೆಯಲಿದೆ.
ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ
ಗಾಯಾಳುಗಳ ಸ್ಥಿತಿಯನ್ನು ಗಮನಿಸಿ ರಾಜ್ಯ ಸರ್ಕಾರದಿಂದ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಹಿರಿಯೂರು, ಚಿತ್ರದುರ್ಗ ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ಬರ್ನ್ ವಾರ್ಡ್‌ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಮುಖ್ಯ ಕಾರಣ
ಪ್ರಾಥಮಿಕ ತನಿಖೆಯಲ್ಲಿ ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಡಿವೈಡರ್ ದಾಟಿ ಬಸ್‌ಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಬೆಂಕಿ ಕೆಲವೇ ನಿಮಿಷಗಳಲ್ಲಿ ಇಡೀ ಬಸ್‌ಗೆ ಹರಡಿತು. ಬಸ್ ಚಾಲಕ, ಕಂಡಕ್ಟರ್ ಮತ್ತು ಕ್ಲೀನರ್ ಮೂವರು ಕಿಟಕಿ ಮೂಲಕ ಹೊರಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದ ಕಾರಣ ಹೊರಬರಲು ಆಗಲಿಲ್ಲ.
ಮೃತರ ಡಿಎನ್ ಎ ಪರೀಕ್ಷೆ
ಮೃತರ ಗುರುತು ದೃಢೀಕರಣಕ್ಕೆ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ. ಕೆಲವರ ಕುಟುಂಬಸ್ಥರು ಇನ್ನೂ ಸಂಪರ್ಕಕ್ಕೆ ಸಿಗದೇ ಆತಂಕದಲ್ಲಿದ್ದಾರೆ. ಮಾವಳ್ಳಿ ತಂಡದಲ್ಲಿ ಬಿಂದು ಮತ್ತು ಅವರ ಐದು ವರ್ಷದ ಮಗುವಿನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇದುವರೆಗೆ 5 ಮಂದಿ ಮೃತರ ಗುರುತು ಪತ್ತೆಹಚ್ಚಲಾಗಿದೆ ಎಂದಿದ್ದಾರೆ.

