ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ರಾಜ್ಯ ಸರಕಾರದಿಂದ ಬಡ ಕಾರ್ಮಿಕರ ಅನುಕೂಲಕ್ಕಾಗಿ ಟೂಲ್ ಕಿಟ್ ವಿತರಣೆ ಮಾಡಲಾಗುತ್ತಿದೆ. ಎಲ್ಲ ಕಾರ್ಮಿಕರು ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನರ ಕಷ್ಟಗಳಲ್ಲಿ ಭಾಗವಹಿಸಿದ್ದು ಕಾಂಗ್ರೆಸ್ ಸರಕಾರ. ಕಾರ್ಮಿಕರ ಹಿತದೃಷ್ಠಿಯಿಂದ ಸರಕಾರ ಅನೇಕ ಯೋಜನೆಗಳನ್ನು ತಂದಿದೆ. ಮುಂಬರುವ ದಿನಮಾನಗಳಲ್ಲಿ ಕಾರ್ಮಿಕರ ಹಿತದೃಷ್ಠಿಯಿಂದ ಮತಕ್ಷೇತ್ರಕ್ಕೆ ಒಂದು ಕಾರ್ಮಿಕರ ಶಾಲೆ ಮಂಜೂರು ಮಾಡುವಂತೆ ಸಂಬಂಧಿಸಿದ ಸಚಿವರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದಕ್ಕೆ ಬೇಕಾದ ಜಾಗೆಯನ್ನು ಆಲಮೇಲ ಮತ್ತು ಸಿಂದಗಿ ಮಧ್ಯದಲ್ಲಿ ಹೂವಿನಹಳ್ಳಿಯ ಹತ್ತಿರ ೭ಎಕರೆ ಜಾಗೆಯನ್ನು ಶಾಲೆಗಾಗಿ ಮೀಸಲಿಡಲಾಗಿದೆ. ಜನೆವರಿ ತಿಂಗಳಲ್ಲಿ ಮಂಜೂರಾಗುವ ಭರವಸೆ ಇದೆ. ಕಾರ್ಮಿಕರ ಏಳೆಗೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ರಜಪೂತ ಮಾತನಾಡಿ, ಕಟ್ಟಡ ಕಾರ್ಮಿಕರಿಗಾಗಿ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಅರ್ಹ ಪಲಾನುಭವಿಗಳಿಗೆ ಮುಟ್ಟಿಸುವ ಕಾರ್ಯ ಇಲಾಖೆಯು ಕಾರ್ಯನಿರ್ವಹಿಸುತ್ತಿದೆ. ಶಾಸಕರ ಈ ಕಾರ್ಯಕ್ಕೆ ಸಹಕಾರ ನೀಡುತ್ತಿರುವುದು ಸಂತಸ. ಈ ನಿಟ್ಟಿನಲ್ಲಿ ಶಾಸಕರು ಸಿಂದಗಿ ನಗರದಲ್ಲಿ ಕಟ್ಟಡ ಕಾರ್ಮಿಕರ ಭವನ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಕಾರ್ಮಿಕ ಇಲಾಖೆ ವತಿಯಿಂದ ೨೬೦ಕ್ಕೂ ಅಧಿಕ ಕಾರ್ಮಿಕರಿಗೆ ಟೂಲ್ ಕಿಟ್‌ಗಳನ್ನು ವಿತರಣೆ ಮಾಡಲಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಅಧೀಕ್ಷಕ ಮಲ್ಲಿಕಾರ್ಜುನ ಬಗಲಿ, ಭೀಮು ವಾಲಿಕಾರ, ಜಯಶ್ರೀ ಹದನೂರ, ಸಂಗಮ ಸಂಸ್ಥೆಯ ನಿರ್ದೇಶಕ ಸಂತೋಷ ಫಾದರ್, ಸುನಂದಾ ಯಂಪುರೆ, ಪ್ರತಿಭಾ ಚೆಳ್ಳಗಿ ಸೇರಿದಂತೆ ಅನೇಕರಿದ್ದರು.

