ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಲು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಿಯಮಾವಳಿಗಳನ್ನು ಗಾಳಿಗೆ ತೂರಿ ಅಲ್ಪ ಸಂಖ್ಯಾತರನ್ನು ಓಲೈಸಲು ಕೋಗಿಲು ಸಂತ್ರಸ್ತರಿಗೆ ಅಕ್ರಮವಾಗಿ ಮನೆ ಹಂಚಿಕೆ ಮಾಡುತ್ತಿರುವುದು ಖಂಡನೀಯ ಹಾಗೂ ಈ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಹೈ ಕಮಾಂಡ್ ಒತ್ತಡಕ್ಕೆ ಮಣಿದು ಬೆಂಗಳೂರಿನ ಯಲಹಂಕದ ಕೋಗಿಲುವಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಕುಟುಂಬಗಳನ್ನು ತೆರವು ಮಾಡಿದ ನಂತರ ಅವರಿಗೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ಮೂಲಕ ಮನೆಗಳನ್ನು ಜನವರಿ 1, 2026 ರಂದು ಹಸ್ತಾಂತರ ಮಾಡಲಾಗುವುದು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಶೆಡ್ ನಿರ್ಮಿಸಿದವರು ರಾಜ್ಯದ ವಸತಿ ಯೋಜನೆಗೆ ಅರ್ಹರೋ? ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ವಲಸೆ ಬಂದು ಕಷ್ಟಪಟ್ಟು ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ವಸತಿ ಯೋಜನೆಗೆ ಅರ್ಹರೋ?
ಸರ್ಕಾರಕ್ಕೆ, ನಿಜಕ್ಕೂ ಕಾಳಜಿಯಿದ್ದಲ್ಲಿ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಗುಳೆ ಬಂದು ಕೂಲಿ ಕಾರ್ಮಿಕರಾಗಿ ಹಲವು ದಶಕಗಳಿಂದ ಕೆಲಸ ಮಾಡುತ್ತಿರುವವರಿಗೆ ಮನೆಗಳನ್ನು ಹಂಚಿಕೆ ಮಾಡಬೇಕೆ ಹೊರತು ತೆರಿಗೆ ಕಟ್ಟದೆ, ಸರ್ಕಾರಿ ಭೂಮಿಯಲ್ಲಿ ಶೆಡ್ ಹಾಕಿಕೊಂಡು ವಾಸಿಸುತ್ತಿರುವವರಿಗಲ್ಲ.
ಜೀವನ ಕಟ್ಟಿಕೊಳ್ಳಲು ಶ್ರಮ ಪಡುತ್ತಿರುವ ನಮ್ಮ ಉತ್ತರ ಕರ್ನಾಟಕದ ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ, ಹಲವು ವರ್ಷಗಳಿಂದ ಇಲ್ಲೇ ನೆಲಸಿ ಸೂರಿಲ್ಲದವರಿಗೆ ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆಯಡಿ ನೀಡಬೇಕೆ ಹೊರತು ಕಾನೂನನ್ನು ಉಲ್ಲಂಘಿಸಿ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದವರಿಗಲ್ಲ ಎಂದು ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

