ವಿಜಯಪುರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಮರ ಶಿಲ್ಪಿ ಜಕಣಚಾರಿ ಅವರ ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಅವರು ಕಲೆಗೆ ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಲ್ಪಕಲೆಯ ಇತಿಹಾಸದಲ್ಲಿ ಅಜರಾಮರಾಗಿರುವ ಅಮರಶಿಲ್ಪಿ ಜಕಣಾಚಾರಿ ಅವರು ಕಲ್ಲಿನಲ್ಲಿ ಜೀವ ತುಂಬಿದ ಮಹಾನ್ ಶಿಲ್ಪಿ, ಹೊಯ್ಸಳ ಯುಗದ ಶಿಲ್ಪಕಲೆಗೆ ಶಾಶ್ವತವಾದ ಕೀರ್ತಿ ತಂದ ಮಹಾನ್ ಕಲಾವಿದರು. ಶಿಲ್ಪಕಲೆ, ಸಂಸ್ಕೃತಿ ಹಾಗೂ ಇತಿಹಾಸದ ಕುರಿತು ಅಮರಶಿಲ್ಪಿ ಜಕಣಾಚಾರಿ ಭಾರತೀಯ ಶಿಲ್ಪಕಲೆಗೆ ವಿಶ್ವಮಟ್ಟದ ಹೆಗ್ಗುರುತನ್ನು ತಂದ ಮಹಾನ್ ಕಲಾವಿದ. ಅವರ ಕಲಾ ಪರಂಪರೆ ನಮ್ಮ ಸಾಂಸ್ಕೃತಿಕ ಅಸ್ತಿತ್ವದ ಹೆಮ್ಮೆಯಾಗಿದೆ. ಅದ್ಭುತ ಶಿಲ್ಪಕಲೆ ಮತ್ತು ಕೊಡುಗೆಗಳನ್ನು ಸರಿಸುವ ನಿಟ್ಟಿನಲ್ಲಿ ಸರ್ಕಾರ ಈ ಮಹನೀಯರ ಜಯಂತಿ ಆಚರಣೆ ಮಾಡುವ ಮೂಲಕ ಅವರ ಕಲಾ ಕೊಡುಗೆಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡುವುದಾಗಿದೆ ಎಂದು ಹೇಳಿದರು.
ಡಾ. ಡಿ.ಎನ್.ಧರಿ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಚಂದ್ರಕಾಂತ ಕುಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಜಿಲ್ಲಾ ಉಪ ಅರಣ್ಯ ಸಂರಕ್ಷಾಣಾಧಿಕಾರಿಗಳಾದ ಮಲ್ಲಿನಾಥ ಕುಸುನೂರ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಮಹೇಂದ್ರ ಸ್ವಾಮಿಜಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೆರವಣಿಗೆಗೆ ಚಾಲನೆ
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಅಮರ ಶಿಲ್ಪಿ ಜಕಣಚಾರ್ಯರ ಭಾವಚಿತ್ರದ ಮೆರವಣಿಗೆಗೆ ಚಾಲನೆ ದೊರೆತು, ಭವ್ಯ ಮೆರವಣಿಗೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ, ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.

