ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಗೆ ಘೋಷಿತ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆಯನ್ನು ಕೈಬಿಟ್ಟು ಸರ್ಕಾರದಿಂದಲೇ ಕಾಲೇಜು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಯ ಸಚಿವರಾದ ಶಿವಾನಂದ ಪಾಟೀಲ ಅವರಿಗೆ ಭರವಸೆ ನೀಡಿದ್ದಾರೆ.
ಬುಧವಾರ ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನ ನೂತನ ಕಟ್ಟಡ ಲೋಕಾರ್ಪಣೆ ಸಮಾರಂಭಕ್ಕೆ ಚಾಲನೆ ನೀಡಿದ ಬಳಿಕ ತಮ್ಮ ಭಾಷಣದ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಉಲ್ಲೇಖಿಸಿ, ಶಿವಾನಂದ ಪಾಟೀಲ ಅವರೇ ವಿಜಯಪುರ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದರು.
ವಿಜಯಪುರ ಜಿಲ್ಲೆಗೆ ಘೋಷಿಸಿತ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಚಿವ ಶಿವಾನಂದ ಪಾಟೀಲ ಅವರು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬೇಡಿಕೆ ಇರಿಸಿದ್ದರು.
ತಾವು ಆರೋಗ್ಯ ಸಚಿವರಾಗಿದ್ದ ಕಾಲದಲ್ಲಿ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರಾಮಾ ಕೇಂದ್ರ, ತಾಯಿ ಮಕ್ಕಳ ಆಸ್ಪತ್ರೆ ಸೇರಿದಂತೆ ಹತ್ತಾರು ಸೌಲಭ್ಯ ಕಲ್ಪಿಸಿದ್ದನ್ನು ಮನವರಿಕೆ ಮಾಡಿ ಸಚಿವ ಶಿವಾನಂದ ಪಾಟೀಲ ಅವರು, ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಪತ್ರ ಬರೆದು, ಸರ್ಕಾರದ ಮೇಲೆ ಒತ್ತಡ ಹೇರಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದಲ್ಲದೇ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ನೂರಕ್ಕೂ ಹೆಚ್ಚು ದಿನಗಳ ಕಾಲ ಪಕ್ಷಾತೀತವಾಗಿ ಹೋರಾಟವೂ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

