ಉದಯರಶ್ಮಿ ದಿನಪತ್ರಿಕೆ
ಚಡಚಣ: ಪಟ್ಟಣದ ದೇವರನಿಂಬರಗಿ ಕ್ರಾಸ್ ಬಳಿ ದ್ವಿಚಕ್ರ ವಾಹನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಹಿಂಬದಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ದೇವರ ನಿಂಬರಗಿ ನಿವಾಸಿ ರೇವಣಸಿದ್ದ ರವಿ (30) ಹಾಗೂ ಇನೂಸ್ ಇಮಾಮ ಶೇಖ (ವಯಸ್ಸು ತಿಳಿದು ಬಂದಿಲ್ಲ) ಎಂಬುವವರು ದ್ವಿಚಕ್ರ ವಾಹನದಲ್ಲಿ ಚಡಚಣದಿಂದ ದೇವರನಿಂಬರಗಿ ಕಡೆಗೆ ತೆರಳುತ್ತಿದ್ದಾಗ, ಚಡಚಣದಿಂದ ಝಳಕಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ದೇವರನಿಂಬರಗಿ ಕ್ರಾಸ್ ಸಮೀಪ ದ್ವಿಚಕ್ರ ವಾಹನವನ್ನು ರಸ್ತೆ ಬಲಭಾಗಕ್ಕೆ ತೆಗೆದುಕೊಳ್ಳುವ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಘಟನೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ರೇವಣಸಿದ್ದ ಅವರಿಗೆ ಎಡಗೈ ಹಾಗೂ ಎರಡೂ ಕಾಲುಗಳಿಗೆ ಗಾಯಗಳಾಗಿದ್ದು, ದ್ವಿಚಕ್ರ ವಾಹನ ಹಿಂಬದಿ ಸವಾರ ಇನೂಸ್ ಅವರಿಗೆ ತಲೆ, ಮುಖ, ಕೈಗಳು ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿ ಮೂಗು ಹಾಗೂ ಕಿವಿಯಿಂದ ರಕ್ತಸ್ರಾವವಾಗಿದೆ.
ಅಪಘಾತದ ಬಳಿಕ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು 108 ಅಂಬುಲೆನ್ಸ್ ಗೆ ಕರೆ ಮಾಡಿ ಗಾಯಾಳುಗಳನ್ನು ಚಡಚಣ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಇನೂಸ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಸಂಜೀವಿನಿ ಆಸ್ಪತ್ರೆಗೆ ಕಳುಹಿಸಲಾಗಿದೆ. ರೇವಣಸಿದ್ದ ಅವರು ಚಡಚಣ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
