ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ ಕೋರಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ ೯ರ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂಜೆ ೪ ಗಂಟೆಗೆ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ.
ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ.
ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿರುವ ರಾಜ್ಯದ ಪ್ರಮುಖ ಸ್ಥಳಗಳ ಪೈಕಿ ಆಯ್ದ ಸ್ಥಳಗಳಲ್ಲಿ ಭೀಮಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಭೀಮ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಪ್ರಕಟಣೆಯಲ್ಲಿ ಕೋರಿದ್ದಾರೆ.

