ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಮಾ.೮ ರಿಂದ೧೦ ರವರೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಎರಡನೇ ದಿನವಾದ ಸೋಮವಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಹಾಗೂ ಶ್ರೀ ಸಿದ್ದೇಶ್ವರ ರಕ್ತ ನಿಧಿ ಸಂಸ್ಥೆ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿರುವ ಸ್ವ-ಸಹಾಯ ಗುಂಪುಗಳ ಮಹಿಳೆಯರು ಮತ್ತು ಸಿಬ್ಬಂದಿ ಹಾಗೂ ಸಾರ್ವಜನಿಕರು ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು. ಅಂದಾಜು ೨೫ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.
ಇದೇ ವೇಳೆ ಸುಮಾರು ೮೦ಕ್ಕೂ ಹೆಚ್ಚು ಜನ ಸ್ವ-ಸಹಾಯ ಸಂಘದ ಮಹಿಳೆಯರು, ಸಾರ್ವಜನಿಕರು ಹಾಗೂ ಸಿಬ್ಬಂದಿ ಸೇರಿದಂತೆ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದ ಗುಂಪು, ರಕ್ತದೊತ್ತಡ, ಸಕ್ಕರೆ ಪ್ರಮಾಣ ಹಾಗೂ ವಿವಿಧ ತಪಾಸಣೆಗಳಿಗೊಳಪಟ್ಟರು. ಸಾರ್ವಜನಿಕರಿಗೆ ಆರೋಗ್ಯದ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯ ಸ್ವ-ಸಹಾಯ ಸಂಘಗಳ ಮಹಿಳೆಯರು, ಜಿಪಂ ಸಿಬ್ಬಂದಿ ಹಾಜರಿದ್ದರು.
