ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು.
ಸೋಮವಾರ ನಡೆದ ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಸಿಂಧು ಪೋತದಾರ ಪಾಲ್ಗೊಂಡು ಮಾತನಾಡಿದರು.
ಮಹಿಳೆಯರು ಧೈರ್ಯದಿಂದ ಮುನ್ನಡೆಯಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಹೇಳಿದ ಅವರು, ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ಸನ್ಮಾನಿಸುವ ಈ ಪ್ರಯತ್ನವನ್ನು ಪ್ರಶಂಸಿಸಿದರು.
ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ ಮಾತನಾಡಿ, ಮಹಿಳೆಯರು ನಾನಾ ಕ್ಷೇತ್ರಗಳಲ್ಲಿ ಮಾಡಿರುವ ಸೇವೆಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಸಂಘದ ಸಂಯೋಜಕಿ ಸನಾ ಕೌಸರ್ ಮೊಗಲಾಯಿ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

