ಉದಯರಶ್ಮಿ ದಿನಪತ್ರಿಕೆ
ಹೆಚ್ ಡಿ ಕೋಟೆ: ಮಡಿವಾಳ ಸಮುದಾಯವು ಹಿಂದುಳಿದಿದ್ದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಮಾಜ ಯಾವ ದೃಷ್ಟಿಕೋನದಿಂದ ನೋಡಿದರೂ ಮುಂದುವರಿದಿಲ್ಲ. ಸಮಾಜ ಮುಖ್ಯವಾಹಿಗೆ ಸೇರಲು ಪರಿಶಿಷ್ಟ ಜಾತಿಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಾಲೂಕು ವೀರ ಮಡಿವಾಳ ಸಂಘದ ಅಧ್ಯಕ್ಷ ಎಲೆ ಹುಂಡಿ ಚಂದ್ರು ಶೆಟ್ಟಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಮಡಿವಾಳ ಜನಾಂಗ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ದೇಶದ 17 ರಾಜ್ಯಗಳಲ್ಲಿ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿಸಲಾಗಿದೆ . ಅದರಂತೆ ರಾಜ್ಯದಲ್ಲೂ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿಸಿ, ಶಿಕ್ಷಣ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು. ದುಡಿದು ತಿನ್ನುವ ಪ್ರಾಮಾಣಿಕ ಸಮಾಜ ಇದಾಗಿದ್ದು, ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯ ನೀಡುವುದಾದರೆ ಈ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ. ಸರಕಾರದ ಸೌಲಭ್ಯ ಪಡೆಯಲು ಮಡಿವಾಳ ಸಮುದಾಯವನು ಪರಿಶಿಷ್ಟ ಜಾತಿಗೆ ಸೇರಿಸಲೇಬೇಕಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ (ರಿ) ಮತ್ತು ಉತ್ತರ ಕರ್ನಾಟಕ ಮಡಿವಾಳರ ಸಂಘ (ರಿ) ಹಾಗೂ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮತ್ತು ಶ್ರೀ ಮುಕ್ತಾನಂದ ಸ್ವಾಮೀಜಿ, ಇವರುಗಳ ದಿವ್ಯ ಸಾನಿಧ್ಯ ಹಾಗೂ ನೇತೃತ್ವದಲ್ಲಿ ಮಾರ್ಚ್ 16 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ. ಹೆಚ್ ಡಿ ಕೋಟೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಮುದಾಯದ ಜನರು ತೆರಳಿ ಧರಣಿಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಹೇಳಿದರು.

