ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠಗೊಂಡಿದ್ದು, ಬಡಜನರ ಜೀವನದಲ್ಲಿ ನೆಮ್ಮದಿ ಮೂಡಿದೆ ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೊಲ್ಹಾರ ತಾಲೂಕು ಅಧ್ಯಕ್ಷ ಸಂತೋಷ್ ಗಣಾಚಾರಿ ಹೇಳಿದರು.
ತಾಲೂಕು ಪಂಚಾಯಿತಿ ವತಿಯಿಂದ ತಾಲೂಕಿನ ಹಳೇರೊಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಬುಧವಾರ ಆಯೋಜಿಸಿದ್ದ ‘ಪಂಚ ಗ್ಯಾರಂಟಿ ಯೋಜನೆಗಳ ಅರಿವು’ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಹಿಳೆಯರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿಯಲು ಅವಕಾಶ ಕಲ್ಪಿಸಿದೆ. ಪಂಚ ಗ್ಯಾರಂಟಿ ಯೋಜನೆಗಳು ಅದರಲ್ಲಿ ಪ್ರಮುಖವಾಗಿದ್ದು, ಬಡವರು ಹಾಗೂ ಮಹಿಳೆಯರ ಬದುಕಿಗೆ ಸಹಕಾರಿಯಾಗಿವೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ಯಾರಾದರೂ ವಂಚಿತರಾಗಿದ್ದರೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದರೆ ಸಮಸ್ಯೆ ಪರಿಹರಿಸಲಾಗುವುದು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಭಾರತಿ ಹಡಪದ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ದೊರೆತಿದ್ದು, ಕೆಲವರು ಹಸು ಖರೀದಿಸಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಿಂದ ಬಡ ಕುಟುಂಬಗಳಿಗೆ ಆಹಾರ ಭದ್ರತೆ ಸಿಗುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಪ್ರಯಾಣ ವೆಚ್ಚ ಉಳಿತಾಯವಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳಿಗೆ ನೋಟು ಪುಸ್ತಕ ಹಾಗೂ ಪೆನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ಎನ್.ಕೆ. ನದಾಫ್, ತಾಲೂಕು ಪಂಚಾಯಿತಿ ಅಧಿಕಾರಿ ಸುನಿಲ್ ಮುದ್ದಿನ್, ರಾಮನಗೌಡ ಪಾಟೀಲ, ಪಾರ್ವತಿ ಹಳ್ಳದ, ಜ್ಯೋತಿ ಆಳಗಿ, ಆನಂದ ಕೋಟ್ಯಾಳ, ಈರಣ್ಣ ನಾಗರಾಳ, ಲಕ್ಷ್ಮಣ ಸುನಗದ, ದುಂಡಪ್ಪ ರೊಳ್ಳಿ, ಮೋತಿಲಾಲ್ ಲಮಾಣಿ, ಜಯಶ್ರೀ ಲಮಾಣಿ, ಕೃಷ್ಣರಾವ್ ಲಮಾಣಿ, ಬಸವರಾಜ ಚಲವಾದಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

