ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ಮರೆಗುದ್ದಿ- ಗಲಗಲಿ ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮಾಜಿ ಶಾಸಕ ಆನಂದ ನ್ಯಾಮಗೌಡ ಕೆಎನ್‌ಎನ್ ಎಲ್‌ನ ವ್ಯವಸ್ಥಾಪಕ ನಿರ್ದೇಶಕರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಏತ ನೀರಾವರಿ ಯೋಜನೆಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ನೀಡಿದ ಅವರು, ಆಲಮಟ್ಟಿ ಜಲಾಶಯದ ಹಿನ್ನೀರನ್ನು ಬಳಸಿಕೊಳ್ಳಲು ಯೋಜನೆ ಸಹಕಾರಿಯಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು. ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆಯವರು ವಿಶೇಷ ಮುತುವರ್ಜಿ ವಹಿಸಿ ನೀರಾವರಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಕಾಮಗಾರಿ ಪ್ರಾರಂಭಿಸಲು ಅಗತ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದ್ದಾರೆ.
216.50 ಕೋಟಿ ವೆಚ್ಚದ ಯೋಜನೆಯಿಂದ ಆಲಮಟ್ಟಿ ಜಲಾಶಯದ ಹಿನ್ನೀರನ್ನು ಬಳಸಿಕೊಂಡು ಜಮಖಂಡಿ ಕ್ಷೇತ್ರದ ಚಿಕ್ಕಪಡಸಲಗಿ ಸೇರಿದಂತೆ ಅನೇಕ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ₹11.50 ಕೋಟಿ ಅನುದಾನ ಮೀಸಲಿರಿಸಲಾಗಿದ್ದು, ಇದರಿಂದ ಬೇಸಿಗೆ ಸಮಯದಲ್ಲಿ ಹಿನ್ನೀರನ್ನು ಬಳಸಿ ಕೊಳ್ಳಬಹುದು ಎಂದು ತಿಳಿಸಿದ್ದಾರೆ.

