ವಿಜಯಪುರದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಸುಜಲಾಮ್ ಆಪ್ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಲ ಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳು ಜನರಿಗಾಗಿ ಇರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ನೀರು ಮಾನವ ಸಂಕುಲದ ಒಂದು ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಗ್ರಾಮೀಣ ಜನರಿಗೆ ಕುಡಿಯುವ ನೀರು ಪೂರೈಸುವಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶ್ರಮವಹಿಸಬೇಕು ಎಂದರು.
ನೀರು ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಜಾಗೃತಿ ವಹಿಸಬೇಕು. ಸರ್ಕಾರವು ಅಭಿವೃದ್ಧಿಪಡಿಸಿದ ಸುಜಲಾಮ್ ಆಪ್ ಬಗ್ಗೆ ಮಾಹಿತಿ ತಿಳಿದುಕೊಂಡು, ಮುಂಬರುವ ದಿನಗಳಲ್ಲಿ ಈ ಆಪ್ ನಲ್ಲಿ ಅವಶ್ಯಕ ಮಾಹಿತಿಯನ್ನು ಇಂದೀಕರಿಸುವ ಮೂಲಕ ಅತ್ಯಂತ ಯಶಸ್ವಿಯಾಗಿ ಯೋಜನೆಗಳ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿ. ಬಿ.ಕುಂಬಾರ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಲ ಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆಯನ್ನು ನಿರಂತರವಾಗಿ ಮತ್ತು ಸಮರ್ಪಕವಾಗಿ ಸಂಬಂಧಪಟ್ಟ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲು ಸಹಾಯಕವಾಗುವಂತೆ ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಪ್ರಮುಖ ಡಿಜಿಟಲ್ ಉಪಕ್ರಮವಾದ ಸುಜಲಾಮ್ ಆಪ್ ನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಅಧಿಕಾರಿಗಳ ಸಮಯ ಉಳಿತಾಯವಾಗಲಿದೆ ಎಂದರು.
ಸುಜಲA ಭಾರತ್ ಆಪ್ (Suರಿಚಿಟಚಿm ಃhಚಿಡಿಚಿಣ ಂಠಿಠಿ) ಎನ್ನುವುದು ಜಲ ಜೀವನ್ ಮಿಷನ್ ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ಕೇಂದ್ರ ಜಲಶಕ್ತಿ ಸಚಿವಾಲಯವು ಪ್ರಾರಂಭಿಸಿದ ಪ್ರಮುಖ ಇ-ಆಡಳಿತ ಸಾಧನವಾಗಿದೆ. ಇದು ಪ್ರತಿ ನೀರಿನ ಯೋಜನೆಗೆ ಸುಜಲ್ ಗಾಂವ್ ಐಡಿ (Suರಿಚಿಟ ಉಚಿoಟಿ Iಆ) ಎಂಬ ವಿಶಿಷ್ಟ ಡಿಜಿಟಲ್ ಗುರುತನ್ನು ಒದಗಿಸುತ್ತದೆ. ಈ ಆಪ್ ಮೂಲಕ ನೀರಿನ ಮೂಲಗಳು, ಪೈಪ್ ಲೈನ್ ಗಳು ಮತ್ತು ನೀರಿನ ಗುಣಮಟ್ಟದ ಮಾಹಿತಿಗಳನ್ನು ನೈಜ-ಸಮಯದಲ್ಲಿ ಟ್ರ‍್ಯಾಕ್ ಮಾಡಬಹುದು. ಇದನ್ನು ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಗಳ ಆಧಾರ್ ಎಂದೇ ಪರಿಗಣಿಸಲಾಗಿದೆ. ಮೂಲದಿಂದ ಮನೆಗೆ ನೀರು ತಲುಪುವವರೆಗೆ ಸಂಪೂರ್ಣ ಮೂಲಸೌಕರ್ಯಗಳ ಸ್ಥಿತಿಯನ್ನು ನೈಜ-ಸಮಯದಲ್ಲಿ ಮೇಲ್ವಿಚಾರಣೆ ಮಾಡಬಹುದು. ನೀರು ಸರಬರಾಜು ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಗ್ರಾಮ ಪಂಚಾಯತಿಗಳು ಹಾಗೂ ಅಧಿಕಾರಿಗಳ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಇದು ಸಹಕಾರಿಯಾಗಿದೆ.ಅದರಂತೆ ಈ ಆಪ್ ನಾಗರಿಕರಿಗೆ ನೀರಿನ ಗುಣಮಟ್ಟದ ಮಾಹಿತಿಯನ್ನು ವೀಕ್ಷಿಸಲು ಮತ್ತು ತಮ್ಮ ಪ್ರತಿಕ್ರಿಯೆಯನ್ನು ನೀಡಲು ಅವಕಾಶ ಕಲ್ಪಿಸುತ್ತದೆ, ಇದು ಸಮುದಾಯದ ಮಾಲೀಕತ್ವವನ್ನು ಬಲಪಡಿಸುತ್ತದೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜನ್ನು ಹೆಚ್ಚು ದಕ್ಷ, ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತವನ್ನಾಗಿ ಮಾಡಲು ಈ ಆಪ್ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಎಸ್.ಎಸ್. ಕೋಟೆನ್ನವರ, ಜಿಲ್ಲೆಯ ಎಲ್ಲ ತಾಲೂಕುಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಗುತ್ತಿಗೆದಾರರು ಹಾಗೂ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುಂಜಾಗೃತೆ ವಹಿಸಿ
ಇದೇ ವೇಳೆ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿ. ಬಿ.ಕುಂಬಾರ ಮಾತನಾಡಿ, ಪ್ರಸ್ತುತ ಬೇಸಿಗೆ ಕಾಲ ಆರಂಭವಾಗಿರುವುದರಿಂದ ಗ್ರಾಮೀಣ ಮಟ್ಟದ ಜನತೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒಂದು ವಾರದಲ್ಲಿ ಕಡ್ಡಾಯವಾಗಿ ದುರಸ್ತಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

