ಕನ್ನಡ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ
ವಿಜಯಪುರ: ಜಿಲ್ಲಾಡಳಿತ ವತಿಯಿಂದ ನವೆಂಬರ್ ೦೧ ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮವು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾಡಳಿತ ವತಿಯಿಂದ ಧ್ವಜಾರೋಹಣ ನಡೆಯುವುದು. ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ವಹಿಸಿದ ಎಲ್ಲಾ ಕಾರ್ಯಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಂದು ಬೆಳಿಗ್ಗೆ ೭:೩೦ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಭುವನೇಶ್ವರ ದೇವಿ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ವಿವಿಧ ಇಲಾಖೆಗಳ ನಿರ್ಮಿಸಿರುವ ಸ್ತಬ್ದಚಿತ್ರಗಳು, ಕಲಾತಂಡಗಳೊಂದಿಗೆ ನಗರದ ವಿವಿಧ ವೃತ್ತಗಳ ಮುಖಾಂತರ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವುದು.
ವೇದಿಕೆ ಸಿದ್ದತೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಆಹ್ವಾನ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕಾರ್ಯ ನಿರ್ವಹಿಸಬೇಕು. ವಿವಿಧ ವೃತ್ತಗಳ ದೀಪಾಲಂಕಾರ, ಇನ್ನಿತರ ಕಾರ್ಯಕ್ರಮ ಕುರಿತು ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈಗಾಗಲೇ ಸಮಿತಿ ರಚಿಸಿದೆ. ವಿವಿಧ ಸಮಿತಿಯ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ಹಾಗೂ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅದೇ ದಿನ ಸಂಜೆ ೫ ಗಂಟೆಗೆ ಕಂದಗಲ್ ಹನುಮಮತರಾಯ ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ್ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಬಸವಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಪತ್ರಾಧಿಕಾರಿಗಳಾದ ರಾಮಣ್ಣ ಅಥಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ್ ವಾಲಿಕಾರ್, ಅಭಿಷೇಕ ಚಕ್ರವರ್ತಿ, ಅಡಿವೆಪ್ಪ ಸಾಲಗಲ್, ಗಿರೀಶ ಕುಲಕರ್ಣಿ,ಬೀಮರಾಯ ಜಿಗಜಿಣಗಿ ಸೇರಿದಂತೆ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

