ಉದಯರಶ್ಮಿ ದಿನಪತ್ರಿಕೆ
ಅಥಣಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂರನೇ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಅತ್ಯಂತ ಸ್ವಾಗತಾರ್ಹ ಮತ್ತು ವಿದ್ಯಾರ್ಥಿ ಸ್ನೇಹಿ ಕ್ರಮವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಕ.ರ.ವೇ) ಅಥಣಿ ತಾಲೂಕು ಅಧ್ಯಕ್ಷ ಶಬೀರ್ ಸಾತಬಚ್ಚೆ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯು ಪರೀಕ್ಷೆಯ ದೃಷ್ಟಿಯಿಂದ ಕೆಲವೊಮ್ಮೆ ಸವಾಲಾಗಿ ಪರಿಣಮಿಸುತ್ತಿತ್ತು. ಈಗ ಸರ್ಕಾರ ಈ ವಿಷಯಕ್ಕೆ ಅಂಕಗಳ ಬದಲಾಗಿ ಗ್ರೇಡಿಂಗ್ ವ್ಯವಸ್ಥೆ ತರುತ್ತಿರುವುದು ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳು ಇತರ ಪ್ರಮುಖ ವಿಷಯಗಳತ್ತ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.
“ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಸುಧಾರಣೆಗಳು ಅತ್ಯಗತ್ಯ. ಕೇವಲ ಅಂಕಗಳ ಬೆನ್ನತ್ತದೆ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾದ ವಾತಾವರಣ ನಿರ್ಮಿಸಲು ಈ ಕ್ರಮ ಸಹಕಾರಿಯಾಗಿದೆ. ಸರ್ಕಾರದ ಈ ನಿರ್ಧಾರವು ಲಕ್ಷಾಂತರ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಯ್ದಿದೆ,” ಎಂದು ಶಬೀರ್ ಸಾತಬಚ್ಚೆ ಸರ್ಕಾರದ ಕ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

