ಉದಯರಶ್ಮಿ ದಿನಪತ್ರಿಕೆ
ಅಥಣಿ: ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಅಥಣಿ ತಾಲ್ಲೂಕಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡುವ ಮೂಲಕ ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸಾಧಕ ವಿದ್ಯಾರ್ಥಿಗಳನ್ನು ಶಾಸಕ ಲಕ್ಷ್ಮಣ ಸವದಿ ಹಾಗೂ ಯುವ ನಾಯಕ ಚಿದಾನಂದ ಸವದಿ ಅವರು ತಮ್ಮ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಕುಮಾರಿ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಈಕೆ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾಳೆ.
ಕುಮಾರ ದಶರಥ ಶಿವಾಜಿ ಭೋಸಲೆ: ಐಗಳಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾದ ಈತ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಈ ಇಬ್ಬರು ಮಕ್ಕಳು ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ.
ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, “ನಮ್ಮ ಅಥಣಿ ತಾಲ್ಲೂಕಿನ ಗ್ರಾಮೀಣ ಭಾಗದ ಪ್ರತಿಭೆಗಳು ಇಂದು ಇಡೀ ರಾಜ್ಯವೇ ನಮ್ಮತ್ತ ತಿರುಗಿ ನೋಡುವಂತಹ ಸಾಧನೆ ಮಾಡಿದ್ದಾರೆ. ಅದರಲ್ಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿರುವುದು ಮತ್ತು ದಶರಥ ದ್ವಿತೀಯ ಸ್ಥಾನ ಪಡೆದಿರುವುದು ನಮ್ಮ ಕ್ಷೇತ್ರಕ್ಕೆ ಸಂದ ದೊಡ್ಡ ಗೌರವವಾಗಿದೆ. ಇವರ ಶ್ರಮ, ಪೋಷಕರ ಬೆಂಬಲ ಹಾಗೂ ಶಿಕ್ಷಕರ ಮಾರ್ಗದರ್ಶನಕ್ಕೆ ಈ ಫಲಿತಾಂಶ ಹಿಡಿದ ಕನ್ನಡಿಯಾಗಿದೆ. ಈ ಯುವ ಪ್ರತಿಭೆಗಳು ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ದೇಶದ ಸತ್ಪ್ರಜೆಗಳಾಗಿ ಹೊರಹೊಮ್ಮಲಿ ಎಂದು ಹಾರೈಸಿದರು.

