ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ಲೋಣಿ (ಬಿಕೆ) ಗ್ರಾಮದಲ್ಲಿರುವ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಪರೀಕ್ಷೆಯಲ್ಲಿ ಸಾವಿತ್ರಿ ಸಿ. ಪಾಟೀಲ 98.40% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಲಕ್ಷ್ಮಿ ಆರ್. ಖೈನೂರ್ 97.3% ಅಂಕಗಳೊಂದಿಗೆ ದ್ವಿತೀಯ ಸ್ಥಾನ, ವೀಣಾ ಸಿ. ಮಾಳಬಾಗಿ 97.2% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶಾಲೆಯ ಒಟ್ಟು ಫಲಿತಾಂಶವೂ ಶ್ಲಾಘನೀಯವಾಗಿದ್ದು, 13 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ, 57 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 18 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸರ್ವ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪಾಲಕರ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಸಹ ವಿದ್ಯಾರ್ಥಿಗಳು ಇದೇ ರೀತಿಯಲ್ಲಿ ಉತ್ತಮ ಸಾಧನೆ ತೋರಿಸಿ ಶಾಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಬೇಕು ಎಂದು ಸಂಸ್ಥೆ ಆಶಿಸಿದೆ.

