ವಿಜಯಪುರದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ ಇಲಾಖೆಗಳು ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಸೂಕ್ತ ಗುರುತು ಫಲಕ, ಅಗತ್ಯವಿದ್ದಲ್ಲಿ ಬ್ಯಾರಿಕೇಡ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳು ನಡೆಯದಂತೆ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಅಪಘಾತ ವಲಯಗಳಲ್ಲಿ ಅಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಪರಿಶೀಲಿಸಿ, ಅಪಘಾತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಪದೇ ಪದೇ ಅಪಘಾತಗಳು ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳ ತಡೆಗೆ ಸೂಕ್ತ ಕ್ರಮ ವಹಿಸಬೇಕು. ಅವಶ್ಯವಿದ್ದೆಡೆ ಸೈನೇಜ್ ಬೋರ್ಡ ಬ್ಯಾರಿಕೇಡ್ ಹಾಕಬೇಕು. ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಆಯೋಜಿಸುವ ಮೂಲಕ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗನುಗುಣವಾಗಿ ಅಪಘಾತಗಳನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ರಸ್ತೆ ಸುರಕ್ಷಾ ನಿಯಮಗಳನ್ನು ಅನುಸರಿಸಲು ವಾಹನ ಸವಾರರಿಗೆ ತಿಳಿಸಿ ಹೇಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದ ಅವರು, ರಸ್ತೆ ಸುರಕ್ಷತೆಗೆ ಸಂಬAಧಿಸಿದAತೆ ನೀಡಲಾದ ಸೂಚನೆಗಳ ಬಗ್ಗೆ ವರದಿ ಸಲ್ಲಿಸಲು ಲೋಕೋಪಯೋಗಿ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ರಸ್ತೆ ವಿಭಜಕಗಳನ್ನು ಅನಧಿಕೃತವಾಗಿ ಒಡೆದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಇವುಗಳನ್ನು ತಕ್ಷಣವೇ ಮುಚ್ಚಿ, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ‘ಅಪಘಾತ ವಲಯಗಳಲ್ಲಿ ಸುಧಾರಣೆಗೆ ಪ್ರತಿಕ್ರಿಯಿಸಿರುವ ಹೆದ್ದಾರಿ ಅಧಿಕಾರಿಗಳು, ಅಪಘಾತಗಳನ್ನು ತಡೆಗಟ್ಟಲು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ರಸ್ತೆಗಳಲ್ಲಿ ಅಳವಡಿಸಲಾದ ಗುರುತು ಫಲಕಗಳು ಹಾಗೂ ರಸ್ತೆ ನಿಯಮಗಳ ಪಾಲನೆಗೆ ವಾಹನ ಸವಾರರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಬೇಕು. ಕಡ್ಡಾಯವಾಗಿ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಬೇಕು. ಈಗಾಗಲೇ ಗುರುತಿಸಲಾದ ಅಪಘಾತ ವಲಯ ಸ್ಥಳಗಳಾದ ಮನಗೂಳಿ ಮುದ್ದೇಬಿಹಾಳಕ್ರಾಸ್ ಸೇರಿದಂತೆ ಹೈಲೆವೆಲ್ ಬ್ಲಾಕ್‌ಪಾಟ್ಸ ಆಗಿರುವುದರಿಂದ ಅಪಘಾತ ತಡೆಗೆ ಅಗತ್ಯ ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರದಿಂದ ಸೋಲಾಪುರ ಮಾರ್ಗದಲ್ಲಿ ಅಪಘಾತ ವಲಯ ಗುರುತಿಸಿದ್ದು, ಅಪಘಾತ ತಡೆಗೆ ಕ್ರಮವಹಿಸಲು ಸೂಚನೆ ನೀಡಲಾಯಿತು.
ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ,ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ ಕುಸುನಾಳ, ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ ಮುದ್ದೇಬಿಹಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

