ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮೀಣ ಬಡಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮಾ ಗಾಂಧಿ ನರೇಗಾ ಮಹತ್ವದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ತಾಂತ್ರಿಕ ಸಂಯೋಜಕರು, ತಾಲೂಕು ಎಮ್.ಐ.ಎಸ್ ಸಂಯೋಜಕರು, ಐ.ಇ.ಸಿ ಸಂಯೋಜಕರು, ಆಡಳಿತ ಸಹಾಯಕರು ಹಾಗೂ ತಾಂತ್ರಿಕ ಸಹಾಯಕರೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲಸದ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬ ಅರ್ಹ ಕುಟುಂಬಗಳಿಗೆ ಕಾಲಮಿತಿಯೊಳಗೆ ಉದ್ಯೋಗ ಒದಗಿಸಬೇಕು ಹಾಗೂ ಕಾಮಗಾರಿಗಳನ್ನು ನಿಗದಿತ ಸಮಯದೊಳಗಾಗಿ ಪೂರ್ಣಗೊಳಿಸುವತ್ತ ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಿದರು. ಉದ್ಯೋಗ ಮಾಡಿದ ಕೂಲಿಕಾರರ ವೇತನ ಪಾವತಿಯಲ್ಲಿ ಯಾವುದೇ ವಿಳಂಬವಾಗದAತೆ ಕ್ರಮ ಕೈಗೊಳ್ಳಬೇಕು, ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಪಾಡಬೇಕು. ಎಂಐಎಸ್ ನಲ್ಲಿ ಸಮಯಕ್ಕೆ ಸರಿಯಾಗಿ ಮಾಹಿತಿ ದಾಖಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಪ್ರತಿ ೨೧೧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಮುದಾಯ ಕಾಮಗಾರಿಗಳನ್ನು ಆರಂಭಿಸಿ ಕೂಲಿಕಾರರ ಫೇಸ್ ಅಥೆಂಟಿಕೇಷನ್ ಅನ್ನು ಎರಡು ದಿನಗಳಲ್ಲಿ ಕಡ್ಡಾಯವಾಗಿ ಶೇ.೧೦೦ರಷ್ಟು ಆರಂಭಿಸಬೇಕು. ಉದ್ಯೋಗ ಒದಗಿಸಿರುವ ಎಲ್ಲಾ ಕೂಲಿಕಾರರಿಗೆ ನಿಗದಿತ ಸಮಯದಲ್ಲಿ ಕೂಲಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಇಲ್ಲಿಯವರೆಗಿನ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಕೂಡಲೇ ಶೇ. ೧೦೦ ರಷ್ಟು ಪೂರ್ಣಗೊಳಿಸಬೇಕು ಎಂದರು.
ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಅನುಷ್ಠಾನ ಇಲಾಖೆಗಳಡಿ ಪ್ರಗತಿ ಹಂತದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಎಲ್ಲಾ ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.

