ಮೇ 30ರಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ | ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಹೇಳಿಕೆ
ಬೆಂಗಳೂರು: ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿರುವುದನ್ನು ಖಂಡಿಸಿ ಮೇ 30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ದರಗಳನ್ನು ಹೆಚ್ಚಿಸುವ ಮೂಲಕ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಕೇಂದ್ರ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 98.6 ಡಾಲರ್‌ಗೆ ಇಳಿದಿದ್ದರೂ ಭಾರತದಲ್ಲಿ ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.
ಕಚ್ಚಾ ತೈಲದ ಬೆಲೆ ಇಳಿದಾಗ ಅದರ ಲಾಭವನ್ನು ಜನರಿಗೆ ವರ್ಗಾಯಿಸಬೇಕು. ಆದರೆ, ಕೇಂದ್ರ ಸರ್ಕಾರ ದರ ಇಳಿಸದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ. ಇದು ಕ್ಷಮಿಸಲಾಗದ ನಡೆ. ಗೃಹಬಳಕೆಯ ಹಾಗೂ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳು, ಸಿಎನ್‌ಜಿ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಗಳೂ ಏರಿಕೆಯಾಗಿವೆ ಎಂದು ಹೇಳಿದರು.
ಇದೇ ವೇಳೆ 2014ರಿಂದ ಇಲ್ಲಿಯವರೆಗೆ ವಿವಿಧ ತೆರಿಗೆಗಳು ಹಾಗೂ ಇತರೆ ಮಾರ್ಗಗಳ ಮೂಲಕ ಕೇಂದ್ರ ಸರ್ಕಾರ ಸುಮಾರು ರೂ.57 ಲಕ್ಷ ಕೋಟಿ ಸಂಗ್ರಹಿಸಿ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ ಅವರು, ಇತ್ತೀಚಿನ ಇಂಧನ ದರ ಏರಿಕೆಯನ್ನು “ಹಗಲು-ರಾತ್ರಿ ನಡೆಯುತ್ತಿರುವ ದರೋಡೆ” ಎಂದು ಕಿಡಿಕಾರಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ಆಗುವ ಮೊದಲು ಮೋದಿ ಅವರು ದೇಶದಲ್ಲಿ ‘ಅಚ್ಚೇ ದಿನ್’ ತರುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ಪ್ರಸ್ತುತ ಪೆಟ್ರೋಲ್ ದರ ಲೀಟರ್‌ಗೆ ರೂ.110.93 ಹಾಗೂ ಡೀಸೆಲ್ ದರ ರೂ.98.89ಕ್ಕೆ ತಲುಪಿದೆ. ಶೀಘ್ರದಲ್ಲೇ ಡೀಸೆಲ್ ಬೆಲೆಯೂ ರೂ.100 ಗಡಿ ದಾಟುವ ಸಾಧ್ಯತೆ ಇದೆ. ಕಳೆದ 11 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಲೀಟರ್‌ಗೆ ರೂ.7.52ರಷ್ಟು ಹೆಚ್ಚಳವಾಗಿದ್ದು, ಕೇಂದ್ರ ಸರ್ಕಾರ ದೇಶವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

“ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ದರಗಳನ್ನು ಹೆಚ್ಚಿಸುತ್ತಿದೆ. ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಜನರ ಪರಿಸ್ಥಿತಿ ಇನ್ನಷ್ಟು ಕಷ್ಟಕರವಾಗುತ್ತಿತ್ತು.”
– ಡಿಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

ಇಂಧನ ಬೆಲೆ ಏರಿಕೆ: ಕಾಂಗ್ರೆಸ್ ನಾಯಕರಿಂದ ರಾಜಕೀಯ
ಬೆಂಗಳೂರು: ಇಂಧನ ಬೆಲೆ ಏರಿಕೆಯನ್ನು ಕಾಂಗ್ರೆಸ್ ನಾಯಕರು ರಾಜಕೀಯಗೊಳಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.
ರಾಜ್ಯ ಸರ್ಕಾರ ವಿಧಿಸಿರುವ ಹೆಚ್ಚಿನ ವ್ಯಾಟ್‌ನಿಂದಾಗಿ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೆಹಲಿ ಸೇರಿದಂತೆ ಇತರ ಹಲವು ರಾಜ್ಯಗಳಲ್ಲಿನ ಇಂಧನ ಬೆಲೆಗಳಿಗಿಂತ ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶೋಕ್, ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುವರಿ ಆದಾಯ ಗಳಿಸುತ್ತಿದೆ. ವ್ಯಾಟ್ ಕಡಿಮೆ ಮಾಡುವ ಬದಲು ಅದು ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ ಎಂದು ಅವರು ಟೀಕಿಸಿದರು. ಬೆಲೆ ಏರಿಕೆಯೂ ಕೇಂದ್ರಕ್ಕೆ ಯಾವುದೇ ಆದಾಯ ತರುವುದಿಲ್ಲ ಮತ್ತು ರಾಜ್ಯ ಸರ್ಕಾರ ವಾರ್ಷಿಕವಾಗಿ 6,000 ಕೋಟಿ ರೂ.ಗಳನ್ನು ಹೆಚ್ಚುವರಿ ಆದಾಯ ಪಡೆಯುತ್ತಿದೆ. ಇಂಧನ ಬೆಲೆ ಏರಿಕೆಯಿಂದ ಗಳಿಸಿದ ಆದಾಯವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

