‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’ | ವಿದಾಯ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗಗಕ್ಕೆ ಕೊನೆಗೂ ಕ್ಲೈಮ್ಯಾಕ್ಸ್ ದೊರೆತಿದೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿರುವ ಸಿದ್ದರಾಮಯ್ಯ ಹೈಕಮಾಂಡ್ ಮೊನ್ನೆ ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹಾಗಾಗಿ, ಇವತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜ್ಯಪಾಲರು ಬಂದ ಮೇಲೆ ನನ್ನ ರಾಜೀನಾಮೆ ಅಂಗೀಕಾರ ಮಾಡುತ್ತಾರೆ ಎಂದು ಹೇಳಿದ್ದಾರೆ.
ಈ ವೇಳೆ ನಾಡಿನ ಜನತೆಯನ್ನು ಉದ್ದೇಶಿಸಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ ಎಂದಿದ್ದಾರೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸು ವ್ಯರ್ಥಪ್ರಯತ್ನವನನ್ನು ನಾನು ಮಾಡುವುದಿಲ್ಲ., ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ ಎಂದಿದ್ದಾರೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ಭಾವುಕರಾಗಿ ನುಡಿದರು.

ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ
ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ, ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡುವ ಎನ್ನುವಷ್ಟು ಮನಸ್ಸು ನೊಂದಿತ್ತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ, ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ದ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ. ನನ್ನ ನೋವು,ದು:ಖ-ದುಮ್ಮಾನಗಳನ್ನು ಈ ಸಂದರ್ಭದಲ್ಲಿ ಪಟ್ಟಿಮಾಡಿ ನನ್ನ ಮನಸ್ಸನ್ನು ಕಹಿಮಾಡಿಕೊಳ್ಳುವುದಿಲ್ಲ. ಆದರೆ ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿ ನುಡಿದರು.

