ಚಡಚಣ ತಾಲೂಕಿನ ಭೀಮಾತೀರದಲ್ಲಿ ರಕ್ತಪಾತ | ಆಸ್ತಿ ವಿವಾದವೇ ಹತ್ಯೆಗೆ ಕಾರಣವೆಂಬ ಶಂಕೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಭೀಕರ ಹತ್ಯೆ ಪ್ರಕರಣ ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಗುಂಡಿನ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಹತ್ಯೆಗೀಡಾದವರು ಚಡಚಣ ಪಟ್ಟಣದ ನಿವಾಸಿಗಳಾದ ಚಂದು ಅಲಿಯಾಸ್ ಚಂದ್ರಶೇಖರ ನಿರಾಳೆ (ಮಾಜಿ ತಾ.ಪಂ. ಸದಸ್ಯ), ಶಿವಪುತ್ರ ನಿರಾಳೆ, ದುಂಡಪ್ಪ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ ಹಾಗೂ ಮತ್ತೊಬ್ಬರಾದ ಚಡಚಣದ ನಿವಾಸಿ ಶಬ್ಬೀರ ಅತ್ತಾರ ಎಂದು ಗುರುತಿಸಲಾಗಿದೆ.
ಘಟನೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಆಸ್ತಿ ವಿವಾದವೇ ಹತ್ಯೆಗೆ ಕಾರಣವಾಗಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

