ಉದಯರಶ್ಮಿ ದಿನಪತ್ರಿಕೆ
ಬಸವನ ಬಾಗೇವಾಡಿ: ರಾಜ್ಯದ ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕೆಂದು ಬಸವನಬಾಗೇವಾಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಿಹಾನ್ ಆರ್. ಕೆರೂರ್ (ಬಾಗವಾನ್) ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಚಿವ ಶಿವಾನಂದ ಪಾಟೀಲರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಜನಪರ ನಾಯಕರಾಗಿ ಹಾಗೂ ಅಭಿವೃದ್ಧಿ ಪರ ಚಿಂತಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಶಿವಾನಂದ ಪಾಟೀಲರು ರೈತರು, ಕಾರ್ಮಿಕರು, ನೇಕಾರರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕರೆಂದು ಗುರುತಿಸಿಕೊಂಡಿದ್ದಾರೆ. ಅವರ ಆಡಳಿತ ಅನುಭವ, ರಾಜಕೀಯ ಪ್ರೌಢಿಮೆ ಮತ್ತು ಜನಸೇವೆಯ ಬದ್ಧತೆಯನ್ನು ಪರಿಗಣಿಸಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಸೂಕ್ತವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಚಿವ ಶಿವಾನಂದ ಪಾಟೀಲರು ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿವೆ. ಆದ್ದರಿಂದ ಅವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರವು ಉಪಮುಖ್ಯಮಂತ್ರಿ ಹುದ್ದೆ ನೀಡಿ ಗೌರವಿಸಬೇಕೆಂದು ರಿಹಾನ್ ಆರ್. ಕೆರೂರ್ (ಬಾಗವಾನ್) ಒತ್ತಾಯಿಸಿದ್ದಾರೆ.

