ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯೊದಿಗೆ ಶುಕ್ರವಾರ ಬೆಳಿಗ್ಗೆ ಆವರಣ ಸ್ವಚ್ಛತಾ ಹಾಗೂ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.
ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಸಿ ನೆಟ್ಟು, ನೀರುಣಿಸುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಪ್ರತಿಪಾದಿಸಿದ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದ್ದು, ಹಸಿರು ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಹಸಿರೇ ಉಸಿರಾಗಿದೆ. ಹಸಿರನ್ನು ಉಳಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಬಹುದೊಡ್ಡ ಕೊಡುಗೆ ನೀಡೋಣ. ಮರಗಳನ್ನು ಬೆಳೆಸುವ ಮೂಲಕ ಪರಿಸರದ ಸಮತೋಲನ ಕಾಪಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯವೂ ನಡೆಸಲಾಯಿತು. ಪರಿಸರ ಸ್ವಚ್ಛತೆ ಮತ್ತು ಹಸಿರು ವಾತಾವರಣ ನಿರ್ಮಾಣ ಎರಡೂ ಪರಸ್ಪರ ಪೂರಕವಾಗಿದ್ದು, ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿ, ಸಿಬ್ಬಂದಿ, ಆಹಾರ ಇಲಾಖೆಯ, ಜಿಲ್ಲಾ ಖಜಾನೆ ಇಲಾಖೆ, ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

