ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಸಾರಿಗೆ ಅಧಿಕಾರಿಗಳು
ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಮರ್ಪಕ ಬಸ್ ಸೌಲಭ್ಯ ಇಲ್ಲದೆ ಹಲವು ದಿನಗಳಿಂದ ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ದೂರವಾಣಿ ಕರೆ ಹಾಗೂ ವಾಟ್ಸಪ್ ಸಂದೇಶಗಳ ಮೂಲಕ ಜಮಖಂಡಿ ಸಾರಿಗೆ ಘಟಕದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಸಾರ್ವಜನಿಕರ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಸಾರಿಗೆ ಅಧಿಕಾರಿಗಳು, ಮನವಿ ಸಲ್ಲಿಕೆಯಾದ ಮರುದಿನವೇ ಚಿಕ್ಕಪಡಸಲಗಿ ಗ್ರಾಮಕ್ಕೆ ಬೆಳಗಿನ ವೇಳೆಯಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು, ಉದ್ಯೋಗಸ್ಥರು ಹಾಗೂ ಸಾರ್ವಜನಿಕರಿಗೆ ಸಂಚಾರದ ಅನುಕೂಲವಾಗಿದ್ದು, ಗ್ರಾಮಸ್ಥರು ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ.
ಹೆಚ್ಚುವರಿ ಬಸ್ ಸೇವೆಯಿಂದ ಪ್ರತಿದಿನ ಬಸ್ ಕೊರತೆಯಿಂದ ಎದುರಾಗುತ್ತಿದ್ದ ಸಮಸ್ಯೆ ನಿವಾರಣೆಯಾಗಿದ್ದು, ಸಮಯಕ್ಕೆ ಸರಿಯಾಗಿ ಶಾಲೆ, ಕಾಲೇಜು ಹಾಗೂ ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗಿದೆ. ಸಾರ್ವಜನಿಕರ ಬೇಡಿಕೆಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಂಡ ಜಮಖಂಡಿ ಸಾರಿಗೆ ಘಟಕದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.
” ಮುಂದೆಯೂ ಇದೇ ರೀತಿಯಲ್ಲಿ ಗ್ರಾಮೀಣ ಪ್ರದೇಶಗಳ ಸಾರಿಗೆ ಸಮಸ್ಯೆಗಳಿಗೆ ಆದ್ಯತೆ ನೀಡಿ ಅಧಿಕಾರಿಗಳು ಪರಿಹಾರ ಒದಗಿಸುಕೋಡಬೇಕು.”
– ಹನಮಂತ ಅಂಬಿ
ಚಿಕ್ಕಪಡಸಲಗಿ ಗ್ರಾಮಸ್ಥ
