ಮುದ್ದೇಬಿಹಾಳದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಯಾವುದೇ ಸಂದರ್ಭದಲ್ಲಿ ತಲೆದೋರಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸರ್ವ ಸನ್ನದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಮುದ್ದೇಬಿಹಾಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರವಾಹಕ್ಕೆ ಸಂಬಂಧಿಸಿದಂತೆ ಪ್ರತಿ ಗ್ರಾಮಕ್ಕೊಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆಲಮಟ್ಟಿಗೆ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರು ಹರಿಯಲಾರಂಭಿಸಿದರೆ ಮುದ್ದೇಬಿಹಾಳ ತಾಲೂಕಿನ ಕೆಲ ಹಳ್ಳಿಗಳು ಪ್ರವಾಹ ಪೀಡಿತವಾಗುವ ಸಂಭವವಿದೆ. ಈ ಕುರಿತು ಕೆಬಿಜೆನ್ನೆಲ್ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದರು.
ಶಿಥಿಲಗೊಂಡ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಗಳ ಬಳಿ ಮಕ್ಕಳು ಸುಳಿಯದಂತೆ ನೋಡಿಕೊಳ್ಳಬೇಕು ಎಂದ ಅವರು, ಈ ಕುರಿತು ಮುನ್ಮೆಚ್ಚರಿಕೆ ಕ್ರಮ ವಹಿಸಬೇಕು ಎಂದರು.
ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಹಾಗಾಗಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ ಅಧಿಕಾರಿಗಳು ಬೀಜ ಮತ್ತು ರಸಗೊಬ್ಬರವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಮುದ್ದೇಬಿಹಾಳ ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

ತಾಳಿಕೋಟಿ ತಾಲೂಕಿನ ವಿವಿಧ ಸ್ಥಳಗಳಿಗೆ ಡಿಸಿ ಭೇಟಿ
ಬಳಿಕ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ.ಅವರು, ತಾಳಿಕೋಟಿ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ತಾಳಿಕೋಟಿ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಾಗ ತಾಳಿಕೋಟಿಯಿಂದ ವಿಜಯಪುರ ಮಾರ್ಗದಲ್ಲಿನ ಹಳೇ ಸೇತುವೆಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಅಲ್ಲಿಯೇ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆಯ ಕಾಮಗಾರಿಯನ್ನು ಪರಿಶೀಲಿಸಿ ಕೆಆರ್ ಡಿಸಿಎಲ್ ಇಂಜಿನಿಯರ್ ಅವರಿಗೆ ತ್ವರಿತವಾಗಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಇದೇ ವೇಳೆ ಜಿಲ್ಲಾಧಿಕಾರಿಗಳು ಸೂಚಿಸಿದರು. ತ
ದನಂತರ ತಾಳಿಕೋಟಿಯಿಂದ ಮುದ್ದೇಬಿಹಾಳ ಮಾರ್ಗದಲ್ಲಿರುವ ಸೋಗಲಿ ಹಳ್ಳಕ್ಕೆ ನಿರ್ಮಾಣವಾಗುತ್ತಿರುವ ನೂತನ ಸೇತುವೆ ಕಾಮಗಾರಿಯನ್ನು ಸ್ಥಾನಿಕ ಪರಿಶೀಲನೆ ನಡೆಸಿ ಲೋಕೋಪಯೋಗಿ ಇಲಾಖೆ ಇಂಜನಿಯರ್ ಗಳಿಗೆ ತ್ವರಿತವಾಗಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು.

