ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ವತಿಯಿಂದ ಜೂನ್ 24 ರಂದು ಬಾಗಲಕೋಟೆಯ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ಶ್ರೀ ಪ್ರಶಾಂತ್ ಕುಲಕರ್ಣಿ ಅವರು 2026ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕದ ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷರಾದ ಸಾಗರ್ ಕಲಾದಗಿ ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನೀಡಿರುವ ಕೊಡುಗೆ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕೈಗೊಂಡಿರುವ ಪ್ರಯತ್ನಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಪ್ರಶಾಂತ್ ಕುಲಕರ್ಣಿ ಅವರು, “ಈ ಗೌರವವು ಕೇವಲ ನನ್ನ ವೈಯಕ್ತಿಕ ಸಾಧನೆಯಲ್ಲ. ನನ್ನ ಕುಟುಂಬದವರು, ಸ್ನೇಹಿತರು, ಸಮಾಜದ ಬಂಧುಗಳು, ಗುರುಹಿರಿಯರು, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳ ಪ್ರೀತಿ, ಪ್ರೋತ್ಸಾಹ ಮತ್ತು ಆಶೀರ್ವಾದಗಳ ಪ್ರತಿಫಲವಾಗಿದೆ. ಸದಾ ನನ್ನನ್ನು ಬೆಂಬಲಿಸಿ ಹಾರೈಸಿದ ಎಲ್ಲರಿಗೂ ನಾನು ಚಿರಋಣಿಯಾಗಿದ್ದೇನೆ” ಎಂದು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ತಮ್ಮನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ ಅವರು, “ಈ ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಲು ಹೆಚ್ಚಿನ ಪ್ರೇರಣೆ ನೀಡಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಶಾಂತ್ ಕುಲಕರ್ಣಿ ಅವರ ಈ ಸಾಧನೆಗೆ ಶಿಕ್ಷಣ ಕ್ಷೇತ್ರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

